ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿಯು ಆರಂಭವಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆ ಪಾರದರ್ಶಕ ಮತ್ತು ಕಟ್ಟುನಿಟ್ಟಾಗಿ ನಡೆಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಇಲ್ಲಿನ ಮಲ್ಲೇಶ್ವರದ 13ನೇ ಅಡ್ಡರಸ್ತೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದಕ್ಕೆ ಭೇಟಿ ನೀಡಿ ಪರೀಕ್ಷಾ ಪ್ರಕ್ರಿಯೆಯನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಬೋಧನಾ ವೃತ್ತಿಗೆ ಇಂದು ಆಕರ್ಷಕ ವೇತನ ಇದೆ. ಇಲ್ಲಿಗೆ ಅರ್ಹರನ್ನು ತರಬೇಕಾಗಿದೆ. ಅದರಲ್ಲೂ ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಬೋಧಕರ ಅಗತ್ಯ ಹೆಚ್ಚಾಗಿದೆ ಎಂದರು.
ಪರೀಕ್ಷೆಗಳ ವಿಚಾದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಕ್ಷವಾಗಿ ಕಾರ್ಯನಿರ್ವಹಿಸುತ್ತಿದ್ದು, ದೇಶದ ಉಳಿದ ರಾಜ್ಯಗಳಿಗೆ ಮಾದರಿಯಾಗಿದೆ. ರಾಜ್ಯದ ಎಲ್ಲ ಕೇಂದ್ರಗಳಲ್ಲೂ ಪರೀಕ್ಷೆ ಸುಗಮವಾಗಿ ನಡೆದಿದೆ. ಯಾವುದೇ ಗೊಂದಲಗಳಿಗೆ ಆಸ್ಪದ ಇಲ್ಲದಂತೆ ಕ್ರಮವಹಿಸಲಾಗಿದೆ ಎಂದು ಅವರು ತಿಳಿಸಿದರು.
ಓದಿ: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ.. ಹಾಜರಾತಿ ಇಲ್ಲದಿದ್ದರೂ SSLC, ದ್ವಿತೀಯ PUC ಪರೀಕ್ಷೆಗೆ ಅವಕಾಶ