ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಸುಸಜ್ಜಿತ ಶಾಲೆ, ಪ್ರೌಢ ಶಾಲೆಗಳ ಕಟ್ಟಡ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅಂಗನವಾಡಿ ಕಟ್ಟಡಗಳ ನಿರ್ಮಾಣದ ಮಹತ್ವಾಕಾಂಕ್ಷಿ ಯೋಜನೆಯನ್ನು ಲೋಕೋಪಯೋಗಿ ಇಲಾಖೆಯಿಂದ ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆಗಳು ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಇಂದು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಮತ್ತು ಸುರಕ್ಷತೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಈ ಕಟ್ಟಡಗಳನ್ನು ನಿರ್ಮಿಸುವ ಜವಾಬ್ಧಾರಿ ವಹಿಸಿಕೊಂಡಿದೆ.
ಶಿಕ್ಷಣ ಇಲಾಖೆಯ ಸಹಯೋಗದಲ್ಲಿ 756 ಕೋಟಿ ರೂ. ವೆಚ್ಚದಲ್ಲಿ ರಾಜ್ಯಾದ್ಯಂತ 3,423 ಪ್ರಾಥಮಿಕ ಹಾಗು ಪ್ರೌಢಶಾಲೆಗಳ ಕಟ್ಟಡಗಳನ್ನು ನಿರ್ಮಿಸುವ ಗುರಿ ಹೊಂದಿದ್ದು, ಈ ಪೈಕಿ ಈಗಾಗಲೇ 2,684 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಉಳಿದ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿವೆ. ಈ ಯೋಜನೆಯನ್ನು ನಬಾರ್ಡನ ಆರ್.ಐ.ಡಿ.ಎಫ್-25 ಅನ್ವಯ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ 137 ಕೋಟಿ ರೂ. ವೆಚ್ಚದಲ್ಲಿ ಒಟ್ಟು 842 ಸುಸಜ್ಜಿತ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸುವ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿದೆ. ಈ ಪೈಕಿ 525 ಕಾಮಗಾರಿಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಉಳಿದವುಗಳನ್ನು ಮುಂದಿನ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಮಕ್ಕಳನ್ನು ಶಾಲೆಗಳತ್ತ ಆಕರ್ಷಿಸಿ ಹೊಸ ಶೈಕ್ಷಣಿಕ ಕ್ರಾಂತಿಗೆ ಅವಕಾಶವಾಗುವ ನಿಟ್ಟಿನಲ್ಲಿ ಈ ಯೋಜನೆ ತುಂಬಾ ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ: ಶಾಲೆಗಳಿಗೆ ಹೊಸ ಮಾರ್ಗಸೂಚಿ ಕುರಿತು ನಾಳಿನ ಸಂಪುಟ ಸಭೆಯಲ್ಲಿ ನಿರ್ಧಾರ: ಸಿಎಂ