ಬೆಂಗಳೂರು: ಹಣಕಾಸಿನ ಲಭ್ಯತೆಗೆ ಅನುಗುಣವಾಗಿ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಇಂದು ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಶಾಸಕ ಆನಂದ್ ಸಿದ್ದುನಾಮೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಹುತೇಕ ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯ ದೇವಸ್ಥಾನಗಳಿಗೆ ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದ್ದಾರೆ. ಹಣಕಾಸಿನ ಲಭ್ಯತೆ ನೋಡಿಕೊಂಡು ಅನುದಾನ ಬಿಡುಗಡೆ ಮಾಡಲಾಗುವುದು. ಈ ಕುರಿತು ಮುಖ್ಯಮಂತ್ರಿಗಳ ಜೊತೆಯೂ ಚರ್ಚಿಸಿ ಹಣ ಬಿಡುಗಡೆ ಮಾಡುವ ಭರವಸೆ ನೀಡಿದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇವಸ್ಥಾನಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಪ್ರಸಕ್ತ ಸಾಲಿನ ಬಜೆಟ್ನಲ್ಲೂ ದೇವಸ್ಥಾನಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಿಎಂ ವಿಶೇಷ ಅನುದಾನ ಪ್ರಕಟಿಸಿದ್ದಾರೆ. ಇದನ್ನು ಬಳಸಿಕೊಂಡು ದೇವಾಲಯಗಳ ಅಭಿವೃದ್ದಿಗೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಲಿದೆ ಎಂದರು.
ಶೀಘ್ರದಲ್ಲೇ ಅನುದಾನ ಬಿಡುಗಡೆ: ಈ ವೇಳೆ ಶಾಸಕ ಪ್ರಸಾದ್ ಅಬ್ಬಯ್ಯ ಮಧ್ಯಪ್ರವೇಶಿಸಿ, ಕಳೆದ 2 ವರ್ಷಗಳಿಂದ ನನ್ನ ಕ್ಷೇತ್ರದ ವ್ಯಾಪ್ತಿಗೆ ಬರುವ ದೇವಸ್ಥಾನಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದೇನೆ. ಕೆಲವು ಕ್ಷೇತ್ರಗಳಿಗೆ ಮಾತ್ರ ಹಣ ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವೆ ಜೊಲ್ಲೆ, ಪ್ರಸ್ತಾವನೆ ಬಂದಿರುವುದು ಗಮನಕ್ಕೆ ಬಂದಿದೆ. ಶೀಘ್ರದಲ್ಲೇ ಅನುದಾನವನ್ನು ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ: ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರದಿಂದ ಪ್ರತ್ಯೇಕವಾಗಿ ಹಣ ಒದಗಿಸುವ ಸಂಬಂಧ ಮುಖ್ಯಮಂತ್ರಿಗಳು ಮತ್ತು ಆ ಭಾಗದ ಶಾಸಕರೊಂದಿಗೆ ಚರ್ಚೆ ನಡೆಸುವುದಾಗಿ ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಬಸವನಗೌಡ ದದ್ದಲ್ ಅವರ ಪ್ರಶ್ನೆಗೆ ಉತ್ತರಿಸಿದರು.
ಈ ಸಾಲಿನ ಬಜೆಟ್‌ನಲ್ಲಿ ರಾಯಚೂರಿನಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವನ್ನು ಜಿಲ್ಲಾ ಖನಿಜ ಪ್ರತಿಷ್ಠಾನದಿಂದ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಆರ್ಥಿಕ ನೆರವಿನೊಂದಿಗೆ 186 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ ಎಂದು ಹೇಳಿದರು.
ರಾಯಚೂರು ವಿಮಾನ ನಿಲ್ದಾಣ ಪ್ರಾರಂಭಿಸಲು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 40 ಕೋಟಿ ಹಾಗೂ ಜಿಲ್ಲಾ ಖನಿಜ ಪ್ರತಿಷ್ಠಾನದಿಂದ 10 ಕೋಟಿ ಒಟ್ಟಾರೆ 50 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಈಗಾಗಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿಯನ್ನು ರೈಟ್ ಸಂಸ್ಥೆ ಸಲ್ಲಿಸಿದ್ದು, ಟೆಂಡರ್ ಕರೆಯಲು ಪ್ರಕ್ರಿಯೆಗಳು ನಡೆದಿವೆ ಎಂದರು.
ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರದಿಂದ ಹಣ ಒದಗಿಸಿ ಕಲ್ಯಾಣ ಕರ್ನಾಟಕ ಮಂಡಳಿಯಿಂದ ಹಣ ಒದಗಿಸಿದರೆ ಅಭಿವೃದ್ಧಿ ಕಾರ್ಯಗಳಿಗೆ ತೊಂದರೆಯಾಗುತ್ತದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಜಿಲ್ಲೆಯ ಎಲ್ಲಾ ಶಾಸಕರ ಮನವಿ ಮೇರೆಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 50 ಕೋಟಿ ರೂ.ಗಳನ್ನು ಯೋಜನೆಗೆ ಒದಗಿಸುವ ತೀರ್ಮಾನ ಮಾಡಲಾಗಿದೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸರ್ಕಾರದಿಂದ ನೆರವು ಒದಗಿಸುವ ಬಗ್ಗೆ ತೀರ್ಮಾನ ಮಾಡುವುದಾಗಿ ತಿಳಿಸಿದರು.
ಇದನ್ನೂ ಓದಿ: ಡಬಲ್ ಇಂಜಿನ್ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ: ಮುನ್ನೋಟ ಇಲ್ಲದ ಬಜೆಟ್ ಮಂಡನೆ: ಕಲಾಪದಲ್ಲಿ ಸಿದ್ದರಾಮಯ್ಯ ಕೆಂಡ