ಬೆಂಗಳೂರು: ಶಿಕ್ಷಣಕ್ಕೆ ವಿಶ್ವದಲ್ಲೇ ಮೊದಲ ಆದ್ಯತೆ ನೀಡಲಾಗುತ್ತಿದೆ. ಶಿಕ್ಷಣ ವ್ಯವಸ್ಥೆ ಸರಿಯಿಲ್ಲವೆಂದರೆ ಸಾಧನೆ ಅಸಾಧ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಹೇಳಿದರು.
ವೈದ್ಯಕೀಯ ಶಿಕ್ಷಣ ಸಚಿವರಾಗಿ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಇಲಾಖೆಯಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಹಾಗೆಯೇ ಇನ್ನೂ ಮಾಡಬೇಕಾದ ಅಭಿವೃದ್ಧಿ ಕಾರ್ಯಗಳೂ ಇವೆ ಎಂದರು.
ಜನವರಿ 12 ರಾಷ್ಟ್ರೀಯ ಯುವಕರ ದಿನಾಚರಣೆ ಹಿನ್ನೆಲೆ ಅಂದು ಯುವಕರಿಗೆ ಸರ್ಕಾರದಿಂದ ಸಾಕಷ್ಟು ಯೋಜನೆ ಘೋಷಿಸುತ್ತೇವೆ. ಅಲ್ಲದೆ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲೂ ಎಚ್ಚರ ವಹಿಸಿದ್ದೇವೆ ಎಂದು ಹೇಳಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಖಾಲಿಯಿರುವ 2000 ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಿದ್ದೇವೆ. ಉತ್ತಮ ಶಿಕ್ಷಕರನ್ನು ನೇಮಿಸಿ ಗುಣಮಟ್ಟದ ಶಿಕ್ಷಣ ಕೊಡುವ ಉದ್ದೇಶ ಹೊಂದಿದ್ದೇವೆ ಎಂದ ಅವರು, ವೈದ್ಯಕೀಯ ವ್ಯವಸ್ಥೆಯಲ್ಲಿ ಈಗಾಗಲೇ ಸಾಕಷ್ಟು ಸುಧಾರಣೆ ಕಂಡಿದ್ದೇವೆ. ಹಾಗೆಯೇ ನ್ಯೂನತೆಗಳಿವೆ. ಅದನ್ನು ಸರಿಪಡಿಸಲು ಬೇಕಾದ ಕ್ರಮಗಳನ್ನು ಕೈಗೊಳ್ಳುತ್ತೇವೆ. ಕರ್ನಾಟಕದ ಆರೋಗ್ಯ ವ್ಯವಸ್ಥೆ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಉತ್ತಮವಾಗಿದೆ ಎಂದರು.
ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರ ಆಯ್ಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ಗುಣಮಟ್ಟದ ವ್ಯಕ್ತಿಗಳನ್ನೇ ಆಯ್ಕೆ ಮಾಡಿದ್ದೇವೆ ಎಂದರು.