ಬೆಂಗಳೂರು: ಜ್ವರದಿಂದ ಬಳಲುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯ ಆಸ್ಪತ್ರೆಯಿಂದ ಬಿಡುಗಡೆಯಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ತೀವ್ರ ಜ್ವರ ಕಾಡಿದ ಹಿನ್ನೆಲೆ ಮಂಗಳವಾರ ಬೆಳಿಗ್ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಸಿದ್ದರಾಮಯ್ಯ ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡುಬಂದಿದೆ. ಆದಾಗ್ಯೂ ಇನ್ನೆರಡು ದಿನ ಅವರು ಆಸ್ಪತ್ರೆಯಲ್ಲಿ ಇರಲಿದ್ದಾರೆ.
ಈಗಾಗಲೇ ಎರಡು ಬಾರಿ ಕೋವಿಡ್ ತಪಾಸಣೆಗೆ ಒಳಗಾಗಿರುವ ಸಿದ್ದರಾಮಯ್ಯ ನಾಳೆ ಇನ್ನೊಂದು ಸುತ್ತಿನ ತಪಾಸಣೆಗೆ ಒಳಗಾಗಲಿದ್ದಾರೆ. ಇದರ ವರದಿ ಬಂದ ಬಳಿಕ ನಾಡಿದ್ದು ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಲು ನಿರ್ಧರಿಸಿದ್ದಾರೆ.
ಆಹಾರದಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆ ಜ್ವರಕ್ಕೆ ತುತ್ತಾಗಿದ್ದ ಸಿದ್ದರಾಮಯ್ಯಗೆ ಜ್ವರ ನಿಯಂತ್ರಣಕ್ಕೆ ಬಂದಿದೆ. ಶರೀರದಲ್ಲಿ ಬೇರೆ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ರಕ್ತದೊತ್ತಡ ಹಾಗೂ ಮಧುಮೇಹ ನಿಯಂತ್ರಣಕ್ಕೆ ಬಂದಿದ್ದು, ಅವರು ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹೆಬ್ಬಾಳ ಶಾಸಕ ಬೈರತಿ ಸುರೇಶ್ ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ಕೊಟ್ಟು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಕೆಲಕಾಲ ಸಮಾಲೋಚಿಸಿದ ಅವರು ರಾಜಕೀಯ ಹಾಗೂ ವೈಯಕ್ತಿಕ ವಿಚಾರಗಳ ಕುರಿತು ಕೆಲ ಕಾಲ ಮಾತುಕತೆ ನಡೆಸಿದ್ದಾರೆ.