ಬೆಂಗಳೂರು : ವರನಟ ಡಾ.ರಾಜ್ ಕುಮಾರ್ ಅವರ 95ನೇ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಅಭಿಮಾನ ಪೂರ್ವಕ ನಮನಗಳನ್ನು ಸಲ್ಲಿಕೆ ಮಾಡಿ ಟ್ವೀಟ್ ಮಾಡಿದ್ದಾರೆ. ನಟಸಾರ್ವಭೌಮ, ಕನ್ನಡಿಗರ ಆರಾಧ್ಯ ದೈವ, ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ವರನಟ ಡಾ.ರಾಜ್ ಕುಮಾರ್ ಅವರ ಜನ್ಮದಿನದಂದು ಅವರಿಗೆ ಅಭಿಮಾನಪೂರ್ವಕ ನಮನಗಳು.
ಕನ್ನಡ ಹಾಗೂ ಕನ್ನಡಿಗರ ಅಸ್ಮಿತೆಯಾಗಿ, ತೆರೆಯ ಮೇಲೆ ತಮ್ಮ ಅದ್ಭುತ ನಟನೆಯಿಂದ, ತೆರೆಯ ಹಿಂದೆ ತಮ್ಮ ಹೃದಯ ವೈಶಾಲ್ಯತೆಯಿಂದ ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿರುವ ಡಾ.ರಾಜ್ ಅವರು ಈ ನಾಡು, ನುಡಿಗೆ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದು, ನಾಡು ಕಂಡ ಶ್ರೇಷ್ಠ ಸಾಧಕ ಕಲಾವಿದ. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ವರನಟ, ಪದ್ಮಭೂಷಣ ಡಾ.ರಾಜ್ ಕುಮಾರ್ ಅವರ ಜಯಂತಿಯಂದು ಅವರಿಗೆ ಅಭಿಮಾನಪೂರ್ವಕ ನಮನಗಳು ಎಂದು ತಿಳಿಸಿದ್ದಾರೆ. ಇನ್ನು ಮುಖ್ಯಮಂತ್ರಿಗಳ ಸಂಪುಟ ಸಹೋದ್ಯೋಗಿಗಳು ರಾಜ್ಯ ಬಿಜೆಪಿ ನಾಯಕರು ಕೂಡ ಡಾ.ರಾಜ್ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.
ಡಾ.ರಾಜ್ ಶ್ರೇಷ್ಠ ಕಲಾವಿದರು : ಕಟೀಲ್
ಕನ್ನಡ ನಾಡಿನ ಸಂಸ್ಕೃತಿ, ಭಾಷೆ ಮತ್ತು ಪರಂಪರೆಗಳನ್ನು ಉಳಿಸಿದ ಒಬ್ಬ ಶ್ರೇಷ್ಠ ಕಲಾವಿದರಾಗಿ ಡಾ. ರಾಜ್‍ಕುಮಾರ್ ಅವರು ಕೆಲಸ ಮಾಡಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ. ಕಂಠೀರವ ಸ್ಟುಡಿಯೋದ ಡಾ.ರಾಜ್‍ಕುಮಾರ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿ ಮಾತನಾಡಿದರು.
ಕರ್ನಾಟಕದ ಕೀರ್ತಿಯನ್ನು ಒಬ್ಬ ನಟನಾಗಿ ಅವರು ಇನ್ನಷ್ಟು ವಿಸ್ತರಿಸಿದ್ದಾರೆ. ಅವರು ಪ್ರಾತಃಸ್ಮರಣೀಯರು. ರಂಗಭೂಮಿಯಿಂದ ಬಂದು ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡಿದ ಅವರು ಸಾವಿರಾರು ಜನರ ಆರಾಧ್ಯ ದೇವತೆಯಾಗಿದ್ದಾರೆ. ಅವರ ನೆನಪು, ಕೆಲಸಗಳು ಮತ್ತು ಆದರ್ಶಗಳು ಸದಾ ನಮಗೆ ಮಾರ್ಗದರ್ಶನ ನೀಡುತ್ತದೆ. ಅವರು ನಮಗೆ ಪ್ರೇರಣೆ ನೀಡಲಿದ್ದಾರೆ ಎಂದು ತಿಳಿಸಿದರು.
ಡಾ.ರಾಜ್ ಕುಮಾರ್ ಅವರ ಸ್ಮಾರಕಕ್ಕೆ ಸಚಿವರಾದ ಮುನಿರತ್ನ, ಗೋಪಾಲಯ್ಯ ಸಂಸದರಾದ ಮುನಿಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ಧರಾಜು, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಮಂಜುನಾಥ್, ಒಬಿಸಿ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರಬಾಬು ಗೌರವ ಸಲ್ಲಿಸಿದರು.
ಇದನ್ನೂ ಓದಿ: ಇಂದು ಡಾ.ರಾಜ್‍ಕುಮಾರ್ ಜನ್ಮದಿನ : ಟ್ವೀಟ್ ಮೂಲಕ ಭಾವಪೂರ್ಣ ನಮನ ಸಲ್ಲಿಸಿದ ಹೆಚ್ಡಿಡಿ, ಹೆಚ್ಡಿಕೆ