ಬೆಂಗಳೂರು : ಕೋವಿಡ್ ಸಂದರ್ಭ ರಾಜ್ಯದಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿದೆ. ಬಿಜೆಪಿ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಕೊರೊನಾ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕೆ ನೆರವಾಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಕರೆ ನೀಡಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೊಸ ಮಾರ್ಗದರ್ಶಿ ಸೂತ್ರಗಳನ್ನು ಈಗಾಗಲೇ ಪ್ರಕಟಿಸಿದೆ. ಅದನ್ನು ಪಾಲಿಸುವ ಮೂಲಕ ಜನರು ರೋಗ ನಿಯಂತ್ರಣಕ್ಕೆ ಸಹಕರಿಸಬೇಕು.
ಮಾಸ್ಕ್ ಧರಿಸುವುದು, ಅನಗತ್ಯವಾಗಿ ಓಡಾಟ ನಡೆಸದಿರುವುದು, ಲಸಿಕೆ ಹಾಕಿಸಿಕೊಳ್ಳುವುದು ಹಾಗೂ ಸ್ವಯಂ ಚಿಕಿತ್ಸೆಗೆ ಒಳಗಾಗದೆ ವೈದ್ಯಕೀಯ ತಜ್ಞರ ಸಲಹೆ ಪಡೆದು ಅದನ್ನು ಪಾಲಿಸುವುದು ಅನಿವಾರ್ಯ ಎಂದರು.
ರಾಜ್ಯ ಸರ್ಕಾರದ ಜನಪ್ರಿಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ವಿಶೇಷ ಪ್ರಯತ್ನ ಮುಂದುವರೆದಿದೆ. ಇದು ಜನಾಂದೋಲನವಾಗಿ ಪರಿವರ್ತನೆಗೊಳ್ಳಲು ನಾಡಿನ ಜನತೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲು ನೋಂದಣಿ ಕಾರ್ಯ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡು ರೋಗ ದೂರ ಮಾಡಲು ಶ್ರಮಿಸಬೇಕು.
ಲಸಿಕೆ ಹಾಕಿಸಿಕೊಂಡವರಲ್ಲಿ ರೋಗದ ಪ್ರಮಾಣ ಅತ್ಯಲ್ಪ ಎಂಬುದು ಈಗಾಗಲೇ ದೃಢಪಟ್ಟಿದೆ. ಈ ನಿಟ್ಟಿನಲ್ಲಿ ಜನರ ಸಹಭಾಗಿತ್ವವೂ ಅನಿವಾರ್ಯ ಎಂದು ತಿಳಿಸಿದರು.
ಪಕ್ಷದ ಜಿಲ್ಲಾ ಘಟಕಗಳು, ವಿವಿಧ ಮೋರ್ಚಾಗಳು ಸಹಾಯವಾಣಿ ಮತ್ತು ನಿಯಂತ್ರಣ ಕೊಠಡಿಗಳನ್ನು ತೆರೆದಿವೆ. ಸಹಾಯವಾಣಿ ಮತ್ತು ನೆರವಿನ ಕಾರ್ಯದಲ್ಲಿ ಪಕ್ಷದ ಜನಪ್ರತಿನಿಧಿಗಳೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜನರು ಅವುಗಳ ನೆರವನ್ನು ಪಡೆಯಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್‍ಮುಕ್ತ ಭಾರತಕ್ಕೆ ಸಹಕರಿಸಿ :
ಪಕ್ಷದ ಪ್ರಮುಖ ಪದಾಧಿಕಾರಿಗಳ ಸಭೆಯನ್ನು ಈಗಾಗಲೇ ವೆಬ್ ಕಾನ್ಫರೆನ್ಸ್ ಮೂಲಕ ನಡೆಸಲಾಗಿದೆ. “ಕೋವಿಡ್‍ಮುಕ್ತ ಭಾರತ” ನಿರ್ಮಾಣದ ಪ್ರಧಾನಿಯವರ ಪ್ರಯತ್ನಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಈಗಾಗಲೇ ಸೂಚಿಸಿದ್ದು, ಅದಕ್ಕೆ ಪಕ್ಷದ ಪ್ರಮುಖರು, ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಆದ್ಯತೆಯ ನೆಲೆಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದು ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.
ಮೋದಿಗೆ ಕೃತಜ್ಞತೆ : ರಾಜ್ಯದ ಮನವಿಗೆ ಸ್ಪಂದಿಸಿದ ಜನಪರ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ರಾಜ್ಯಕ್ಕೆ ಅಗತ್ಯ ಹೆಚ್ಚುವರಿ ವೈದ್ಯಕೀಯ ಗುಣಮಟ್ಟದ ಆಮ್ಲಜನಕ ಮತ್ತು ಔಷಧಿಗಳನ್ನು ಬಿಡುಗಡೆಗೊಳಿಸುವುದಾಗಿ ತಿಳಿಸಿದ್ದಾರೆ. ಇದಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಕಟೀಲ್ ತಿಳಿಸಿದ್ದಾರೆ.