ಬೆಂಗಳೂರು: ದೇವರ ನಾಡು ಎಂದೇ ಪ್ರಸಿದ್ಧಿಯಾಗಿರುವ ಕೇರಳ ರಾಜ್ಯಕ್ಕೆ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ದೇಶದ ಪ್ರಮುಖ ಹತ್ತು ನಗರಗಳಲ್ಲಿ ಪ್ರಚಾರ ಕಾರ್ಯ ಆರಂಭಿಸಿದೆ.
ಪ್ರಚಾರ ಕಾರ್ಯಕ್ರಮದ ಭಾಗವಾಗಿ ಕೇರಳ ಪ್ರವಾಸೋದ್ಯಮ ಅಧಿಕಾರಿಗಳು ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಇದೇ ವೇಳೆ ಟೂರಿಸ್ಟ್ ಏಜೆನ್ಸಿಗಳ ಮಾಲೀಕರ ಜೊತೆ ಚರ್ಚೆ ನಡೆಸಿ ಮಾಹಿತಿ ನೀಡಿದರು. ರಾಜ್ಯದಲ್ಲಿನ ಪ್ರವಾಸಿ ತಾಣಗಳು, ಪಾರಂಪರಿಕ ಕಟ್ಟಡಗಳು, ದೇವಾಲಯಗಳು ಸೇರಿದಂತೆ ರಮಣೀಯ ತಾಣಗಳ ಕಿರು ಚಿತ್ರಗಳನ್ನು ಪ್ರದರ್ಶಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಕೇರಳ ರಾಜ್ಯದಲ್ಲಿನ ಬುಡಕಟ್ಟು ಸಂಸ್ಕೃತಿ, ಜಾನಪದ ನೃತ್ಯ, ರಕ್ಷಣಾ ಕಲೆ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ಹಿರಿಯ ಐಎಎಸ್ ಅಧಿಕಾರಿ ಪಿ. ಬಾಲ ಕಿರಣ್, ರಾಜ್ಯದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ದೇಶದ ಪ್ರಮುಖ ಹತ್ತು ನಗರಗಳಲ್ಲಿ ಪ್ರಚಾರ ಅಭಿಯಾನ ಹಮ್ಮಿಕೊಂಡಿದ್ದೇವೆ. ದೇಶದಲ್ಲೇ ಅತ್ಯುತ್ತಮ ಪ್ರವಾಸಿ ತಾಣಗಳನ್ನು ಹೊಂದಿರುವ ಕೇರಳಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆ ವಾರ್ಷಿಕವಾಗಿ ಶೇ. 16 ರಂತೆ ಗಣನೀಯ ಏರಿಕೆಯಾಗುತ್ತಿದೆ ಎಂದರು.