ಬೆಂಗಳೂರು: ರಾಜ್ಯದಲ್ಲಿ ಪಿಪಿಇ ಕಿಟ್, ಎನ್-95 ಮಾಸ್ಕ್ ಹಾಗೂ ಟ್ರಿಪಲ್ ಲೇಯರ್ ಮಾಸ್ಕ್ ಸೇರಿದಂತೆ ಕೋವಿಡ್-19ಗೆ ಚಿಕಿತ್ಸೆ ನೀಡಲು ಸಂಬಂಧಿಸಿದ ಉಪಕರಣಗಳ ಕೊರತೆ ಇಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‍ಗೆ ತಿಳಿಸಿದೆ.
ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು, ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ, ಲಿಖಿತ ವಾದ ಮಂಡಿಸಿದ ಸರ್ಕಾರಿ ವಕೀಲ ವಿಕ್ರಂ ಹುಯಿಲ್ಗೋಳ, ರಾಜ್ಯದಲ್ಲಿ ಪಿಪಿಇ ಕಿಟ್, ಎನ್-95 ಮಾಸ್ಕ್, ಟ್ರಿಪಲ್ ಲೇಯರ್ ಮಾಸ್ಕ್ ಸೇರಿದಂತೆ ಕೋವಿಡ್-19ಗೆ ಚಿಕಿತ್ಸೆ ನೀಡಲು ಅಗತ್ಯವಿರುವ ವಸ್ತುಗಳು ಮತ್ತು ಉಪಕರಣಗಳ ಕೊರತೆ ಇಲ್ಲ. ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೀದರ್ ಜಿಲ್ಲೆಗಳಲ್ಲಿ ಮಾಸ್ಕ್ ಕೊರತೆ ಇರುವುದು ತಿಳಿದ ಕೂಡಲೇ ಜಿಲ್ಲಾಡಳಿತಗಳ ಮೂಲಕ ಅಗತ್ಯ ಪ್ರಮಾಣದಲ್ಲಿ ಪೂರೈಸಲಾಗಿದೆ ಎಂದು ತಿಳಿಸಿದರು. ಜತೆಗೆ ಈವರೆಗಿನ ಜಿಲ್ಲಾವಾರು ಬೇಡಿಕೆ, ಪೂರೈಕೆ ಹಾಗೂ ಸದ್ಯದ ದಾಸ್ತಾನು ಪಟ್ಟಿಯನ್ನು ಪೀಠಕ್ಕೆ ಸಲ್ಲಿಸಿದರು. ಅಲ್ಲದೆ, ಕೊರೊನಾ ನಿಯಂತ್ರಿಸಲು ಶ್ರಮಿಸುತ್ತಿರುವ ಸಿಬ್ಬಂದಿಗೆ ಪಿಪಿಇ ಕಿಟ್ ಸೇರಿದಂತೆ ಅಗತ್ಯ ಸುರಕ್ಷತಾ ಸಾಮಗ್ರಿಗಳನ್ನು ಪೂರೈಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇನ್ನು ರಾಜ್ಯದಲ್ಲಿನ ಖಾಸಗಿ ಆಸ್ಪತ್ರೆಗಳಿಗೆ ಮಾಸ್ಕ್, ಪಿಪಿಇ ಕಿಟ್ ಮತ್ತಿತರ ಸುರಕ್ಷತಾ ಸಾಧನಗಳನ್ನು ನೀಡುತ್ತಿಲ್ಲ.
ಮುಕ್ತ ಮಾರುಕಟ್ಟೆಯಲ್ಲಿ ಈ ವಸ್ತುಗಳು ದೊರೆಯುತ್ತಿರುವುದರಿಂದ ಸದ್ಯಕ್ಕೆ ನೀಡುತ್ತಿಲ್ಲ. ಒಂದು ವೇಳೆ, ಸರ್ಕಾರ ಖಾಸಗಿ ಆಸ್ಪತ್ರೆಗಳನ್ನು ಚಿಕಿತ್ಸೆಗೆ ಬಳಸಿಕೊಂಡಲ್ಲಿ ಆಗ ಈ ವಸ್ತುಗಳನ್ನು ನೀಡುತ್ತೇವೆ ಎಂದರು. ಹೇಳಿಕೆ ದಾಖಲಿಸಿಕೊಂಡ ಪೀಠ ವಿಚಾರಣೆ ಮುಂದೂಡಿತು.