ಬೆಂಗಳೂರು : ಬಿಬಿಎಂಪಿ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಅದರ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ಪಾಲಿಕೆಯ ಮಾಜಿ ಸದಸ್ಯ ಎನ್ಆರ್ ರಮೇಶ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ಈ ಹಿಂದೆ ದಾಖಲಾಗಿದ್ದ ಪ್ರಕರಣದ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್ ಪೊಲೀಸರಿಗೆ ನಿರ್ದೇಶಿಸಿದೆ.
ಬಿಬಿಎಂಪಿಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿದ್ದು, ಈ ಸಂಬಂಧ ಪಾಲಿಕೆಯ ರಸ್ತೆ ಮತ್ತು ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಬಿ.ಎಸ್ ಪ್ರಹ್ಲಾದ್ ವಿರುದ್ಧ ತನಿಖೆ ನಡೆಸಲು ಆದೇಶಿಸುವಂತೆ ಕೋರಿ ಎನ್.ಆರ್ ರಮೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಬಿ.ಎಸ್. ಪ್ರಹ್ಲಾದ್ ಪರ ವಕೀಲರು, ಎನ್.ಆರ್ ರಮೇಶ್ ಅಧಿಕಾರಿಗಳನ್ನು ಬೆದರಿಸಿ ತಮಗೆ ಬೇಕಾದವರಿಗೆ ಟೆಂಡರ್ ನೀಡುವಂತೆ ಒತ್ತಾಯಿಸುತ್ತಿದ್ದರು. ಈ ಸಂಬಂಧ 2015ರಲ್ಲಿ ಅಂದಿನ ಪಾಲಿಕೆ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಅಮೃತಹಳ್ಳಿ ಪೊಲೀಸ್ ಠಾಣೆಗೆ ಎನ್.ಆರ್. ರಮೇಶ್ ವಿರುದ್ಧ ದೂರು ದಾಖಲಿಸಿದ್ದರು. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.
ಹೇಳಿಕೆ ಪರಿಗಣಿಸಿದ ಪೀಠ, ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ 6 ವರ್ಷವಾದರೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿತಲ್ಲದೇ, ಈ ಸಂಬಂಧ ಪೊಲೀಸರು ನಡೆಸಿರುವ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಅಮೃತಹಳ್ಳಿ ಠಾಣೆ ಪೊಲೀಸರಿಗೆ ನಿರ್ದೇಶಿಸಿತು. ಹಾಗೆಯೇ, ವರದಿ ನಂತರ ಇತರೆ ಅಂಶಗಳ ಬಗ್ಗೆ ಪರಿಶೀಲಿಸಿ ಆದೇಶ ನೀಡಲಾಗುವುದು ಎಂದು ತಿಳಿಸಿ, ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಿತು.