ಬೆಂಗಳೂರು : ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ಉದ್ಯಮಿ ಆಲಂ ಪಾಷಾಗೆ ಒಂದು ಲಕ್ಷ ರೂ. ದಂಡ ವಿಧಿಸಿ ಹೈಕೋರ್ಟ್ ಆದೇಶಿಸಿದೆ.
ಆಲಂ ಪಾಷಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಚ್.ಪಿ.ಸಂದೇಶ್ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ಮಾಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ಶೀಲವಂತ್ ವಾದಿಸಿ, ಪ್ರಕರಣ ಕುರಿತು ಪೊಲೀಸರು ನಡೆಸಿರುವ ತನಿಖೆಯಲ್ಲಿ ಲೋಪವಾಗಿದೆ ಎಂದು ಭಾವಿಸಿ ಸಿಬಿಐ ತನಿಖೆಗೆ ಆದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ. ಆದರೆ, ತನಿಖೆಯಲ್ಲಿ ಯಾವುದೇ ಲೋಪವಾಗಿಲ್ಲ. ಈ ಕುರಿತು ಪ್ರಕರಣದ ದೂರುದಾರರಾಗಲಿ ಅಥವಾ ಆರೋಪಿಗಳಾಗಲಿ ಆಕ್ಷೇಪಿಸಿಲ್ಲ ಎಂದು ವಿವರಿಸಿದರು.
ಇದನ್ನೂ ಓದಿ: ರಾಸಲೀಲೆ ಪ್ರಕರಣದ ವಿರುದ್ಧ ಕಾಂಗ್ರೆಸ್ ಪ್ರತಿಭಟಿಸಿದರೆ ಬೆಂಬಲ: ಶಾಸಕ ಬಾಲಕೃಷ್ಣ
ಅಲ್ಲದೆ, ಅರ್ಜಿದಾರರಿಗೂ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲದಿದ್ದರೂ, ತನಿಖೆ ಸಮರ್ಪಕವಾಗಿ ನಡೆದಿಲ್ಲ ಎಂದು ಆರೋಪಿಸಿ ಸುಖಾಸುಮ್ಮನೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದರಿಂದ ಕೋರ್ಟ್‌ನ ಅಮೂಲ್ಯ ಸಮಯ ವ್ಯರ್ಥವಾಗಿದ್ದು, ಅರ್ಜಿ ವಜಾಗೊಳಿಸಬೇಕು ಎಂದು ಮನವಿ ಮಾಡಿದರು.
ವಾದ ಪುರಸ್ಕರಿಸಿದ ಪೀಠ, ಅಗತ್ಯತೆ ಇಲ್ಲದಿದ್ದರೂ ಅರ್ಜಿ ಸಲ್ಲಿಸಿ ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟು ಅರ್ಜಿದಾರನಿಗೆ ಒಂದು ಲಕ್ಷ ರೂ. ದಂಡ ವಿಧಿಸಿ, ಅರ್ಜಿ ವಜಾ ಮಾಡಿ ಆದೇಶಿಸಿತು.