ಬೆಂಗಳೂರು: ಸರ್ಕಾರಿ ಪದವಿಪೂರ್ವ ಕಾಲೇಜುಗಳಿಗೆ ಒಂದು ಸಾವಿರ ಡಿ ಗ್ರೂಪ್ ನೌಕರರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ವಿಧಾನಸಭೆಯಲ್ಲಿ ತಿಳಿಸಿದರು.
ಇಂದು ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಶಿವಾನಂದ ಎಸ್.ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 1,250 ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿ ಪ್ರಾರಂಭವಾಗಿದೆ. 12 ಸಾವಿರ ಅತಿಥಿ ಉಪನ್ಯಾಸಕರ ನೇಮಕವಾಗಿದೆ. ಕಾಲೇಜುಗಳಿಗೆ ರಾತ್ರಿ ಭದ್ರತಾ ಸಿಬ್ಬಂದಿ ಒದಗಿಸುವುದಿಲ್ಲ ಎಂದರು.
ವಿದ್ಯಾರ್ಥಿಗಳಿಂದ ಸಂಗ್ರಹಿಸಲಾಗುವ ಶುಲ್ಕವನ್ನು ಆಯಾ ಕಾಲೇಜುಗಳ ಬ್ಯಾಂಕ್ ಖಾತೆಗಳಲ್ಲಿ ಜಮೆ ಮಾಡಲು ತೀರ್ಮಾನಿಸಲಾಗಿದೆ. ಗೋಳತಂಗಿ ಮತ್ತು ಮನಗೂಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಮೂಲಸೌಲಭ್ಯ ಒದಗಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರು ನೇಮಕವಾಗಿದೆ. ಆದರೆ ವಾಚ್‍ಮನ್, ಅಟೆಂಡರ್ ಸೇರಿದಂತೆ ಡಿ ಗ್ರೂಪ್ ಹುದ್ದೆಗಳು ಭರ್ತಿಯಾಗಬೇಕು. ನಮ್ಮ ಕ್ಷೇತ್ರದ ಸರ್ಕಾರಿ ಕಾಲೇಜಿನಲ್ಲಿ 3 ಸಾವಿರ ವಿದ್ಯಾರ್ಥಿಗಳು ಇದ್ದು 130 ಅತಿಥಿ ಉಪನ್ಯಾಸಕರಿದ್ದಾರೆ. ಶೇ.90ರಷ್ಟು ಫಲಿತಾಂಶ ಬರುತ್ತಿದೆ. ಬೋಧಕೇತರ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂದರು. ಇದಕ್ಕೂ ಮುನ್ನ ಮಾತನಾಡಿದ ಶಿವಾನಂದ ಪಾಟೀಲ್, ಮೀಸಲಿಟ್ಟ ಹಣ ಖರ್ಚಾಗುತ್ತಿಲ್ಲ ಎಂದಾಗ, ಅನುದಾನದ ಹಣವನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳುತ್ತಿದ್ದೇವೆ ಎಂದು ಸಚಿವರು ಹೇಳಿದರು.
'ಹೊಸದಾಗಿ ಐಟಿಐ ಕಾಲೇಜು ಮಂಜೂರು ಇಲ್ಲ': ಸರ್ಕಾರಿ ಐಟಿಐ ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದಲ್ಲಿ ವಿದ್ಯಾರ್ಥಿಗಳು ದಾಖಲಾಗದೆ ಸೀಟುಗಳು ಖಾಲಿ ಉಳಿಯುತ್ತಿವೆ ಎಂದು ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ 270 ಐಟಿಐ ಕಾಲೇಜುಗಳಿದ್ದು, ಪೂರ್ಣವಾಗಿ ಭರ್ತಿಯಾಗುತ್ತಿಲ್ಲ. ಹೀಗಾಗಿ ಹೊಸದಾಗಿ ಐಟಿಐ ಮಂಜೂರು ಮಾಡುವುದಿಲ್ಲ. ನಮ್ಮಲ್ಲಿ 178 ಅನುದಾನಿತ ಕಾಲೇಜುಗಳಿವೆ ಎಂದು ಇದೇ ವೇಳೆ ಹೇಳಿದ್ದಾರೆ.
ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಎಕರೆ ಜಾಗ ಒದಗಿಸಿದರೆ ಹೊಸ ಐಟಿಐ ಕಾಲೇಜು ಸ್ಥಾಪನೆ ಬಗ್ಗೆ ಪರಿಶೀಲಿಸಲಾಗುವುದು ಎಂದ ಸಚಿವರು, ಇರುವ ಕಾಲೇಜುಗಳಿಗೆ ವಿದ್ಯಾರ್ಥಿಗಳ ಕೊರತೆ ಇರುವುದರಿಂದ ಹೊಸದಾಗಿ ಕಾಲೇಜು ಪ್ರಾರಂಭ ಮಾಡಿದರೆ ಸಂಪನ್ಮೂಲ ವ್ಯರ್ಥವಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಡೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಾಣ: ಗುಬ್ಬಿ ತಾಲ್ಲೂಕಿನ ಮಡೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 2022-23ನೇ ಸಾಲಿನಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಆರೋಗ್ಯ ಕೇಂದ್ರಕ್ಕೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು. ಕೇಂದ್ರ ನಿರ್ಮಾಣಕ್ಕಾಗಿ ಎರಡು ಎಕರೆ ಜಮೀನು ಇರುವುದಾಗಿ ಇದೇ ವೇಳೆ ಹೇಳಿದ್ದಾರೆ.
ಜೊತೆಗೆ, ಬೆಳಗಾವಿಯ ಒಡಗಾವಿಯಲ್ಲಿ ಕಿದ್ವಾಯಿ ಸಂಸ್ಥೆಯ ಒಂದು ಶಾಖೆಯನ್ನು ಪ್ರಾರಂಭಿಸಲಾಗುವುದು, ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರವನ್ನು 50 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದ್ದು, ಬೆಂಗಳೂರಿನಲ್ಲಿರುವ ಕ್ಯಾನ್ಸರ್ ಆಸ್ಪತ್ರೆಯ ಮಾದರಿಯಲ್ಲೇ ನಿರ್ಮಿಸಲಾಗುತ್ತಿದ್ದು, ಕ್ಯಾನ್ಸರ್ ರೋಗಕ್ಕೆ ಸಂಬಂಧಪಟ್ಟ ಎಲ್ಲ ಸೌಲಭ್ಯಗಳು ಅಲ್ಲಿ ದೊರೆಯಲಿವೆ ಎಂದು ಸಚಿವರು ಹೇಳಿದರು.
ಇದನ್ನೂ ಓದಿ: ವಿಧಾನಸಭೆ: ಹೈಕೋರ್ಟ್ ಆದೇಶ ಧಿಕ್ಕರಿಸಿ ಪ್ರತಿಭಟಿಸುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ