ಬೆಂಗಳೂರು: ನಗರದಲ್ಲಿ ಹೊಸ ವರ್ಷ ಆಚರಣೆ ವೇಳೆ ಸಾರ್ವಜನಿಕರಿಗೆ ಯಾವುದೇ ತೊಂದರೆಗಳು ಆಗಬಾರದೆಂದು ಖಾಕಿ ಪಡೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಬೆಂಗಳೂರಿನೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದೆ.
ಹೊಸ ವರ್ಷದ ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಕೊರೊನಾ ಹಿನ್ನೆಲೆ ಸುರಕ್ಷತೆ, ಎಚ್ಚರಿಕೆಯಿಂದ ನೂತನ ವರ್ಷವನ್ನು ಬರಮಾಡಿಕೊಳ್ಳಿ, ಅನಾವಶ್ಯಕವಾಗಿ ಓಡಾಡುವುದನ್ನು ನಿಲ್ಲಿಸಿ ಎಂದು ಬೆಂಗಳೂರು ಪೊಲೀಸರು ಖಡಕ್ ವಾರ್ನಿಂಗ್ ನೀಡಿದ್ದಾರೆ.
ಹೊಸ ವರ್ಷದ ಹಿನ್ನೆಲೆ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಬಾರ್, ಪಬ್, ರೆಸ್ಟೋರೆಂಟ್ ಅಂತ ಕೋವಿಡ್ ನಿಯಮ ಉಲ್ಲಂಘನೆ ಮಾಡಿದರೆ ದಂಡ ಬೀಳುವುದು ಖಚಿತ. ಯಾರು ಬೇಕಾಬಿಟ್ಟಿ ತಿರುಗಾಡಬಾರದು ಎಂದು ಇಂದು ಮಧ್ಯಾಹ್ನ 12 ಗಂಟೆಯಿಂದಲೇ 144 ಸೆಕ್ಷನ್ ಜಾರಿಗೆ ಮಾಡಿದ್ದು, ನಾಳೆ ಬೆಳಗ್ಗೆ 6 ರ ವರೆಗೂ ನಿಷೇಧಾಜ್ಞೆ ಮುಂದುವರೆಯಲಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಇನ್ನು ಈಗಾಗಲೇ ಪೊಲೀಸರು ಫುಲ್ ಅಲರ್ಟ್ ಆಗಿದ್ದು, ನಿನ್ನೆ ತಡರಾತ್ರಿವರೆಗೂ ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸರು ವಾಹನಗಳ ತಪಾಸಣೆ ನಡೆಸಿದರು. ತಡರಾತ್ರಿ ಸಂಚರಿಸುವ ವಾಹನಗಳನ್ನು ತಡೆದು ಮಾಹಿತಿ ಕಲೆ ಹಾಕಿದರು. ಜೊತೆಗೆ ಅನಗತ್ಯವಾಗಿ ಸುತ್ತಾಡುವವರಿಗೆ ದಂಡ ಹಾಕಿ, ಬಿಸಿ ಮುಟ್ಟಿಸಿದರು.