ಬೆಂಗಳೂರು: ನಾಳೆ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ. ಈ ಹಿನ್ನೆಲೆ ನಗರ ಪೊಲೀಸರು, ಈಗಾಗಲೇ ನಗರದಾದ್ಯಂತ ತಪಾಸಣಾ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಪೊಲೀಸರು ನಗರದ ಎಲ್ಲ ವಿಭಾಗಗಳಲ್ಲೂ ಬಾಂಬ್ ಪತ್ತೆದಳ, ಶ್ವಾನ ದಳಗಳನ್ನು ಬಳಸಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಗುಪ್ತದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ರಾತ್ರಿ ಗಸ್ತು ತಿರುಗುತ್ತಿದ್ದು, ಅನುಮಾನಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದಾರೆ. ಜೊತೆಗೆ, ನಗರ ವ್ಯಾಪ್ತಿಯ ಸುತ್ತ - ಮುತ್ತ ಅನುಮಾನಾಸ್ಪದ ವಸ್ತುಗಳು ಹಾಗೂ ವ್ಯಕ್ತಿಗಳು ಕಂಡು ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ನಾಗರಿಕರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ರಾಣೆಬೆನ್ನೂರು: ಸರ್ಕಾರಿ ಬಸ್ ಹರಿದು ಅಂಗನವಾಡಿ ಶಿಕ್ಷಕಿ ಸಾವು
ನಗರದ ಮಾಲ್‌ಗಳು, ಬಸ್ ನಿಲ್ದಾಣಗಳು, ಪಾರ್ಕ್, ಉದ್ಯಾನ, ದೇವಸ್ಥಾನ, ಧಾರ್ಮಿಕ ಕೇಂದ್ರಗಳು ಹಾಗೂ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ತಪಾಸಣಾ ಕಾರ್ಯಗಳು ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸರು ತಮ್ಮ ವ್ಯಾಪ್ತಿಯಲ್ಲಿನ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಮೇಲೆ ನಿಗಾವಹಿಸಿದ್ದು, ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿದೆ. ಭದ್ರತಾ ವ್ಯವಸ್ಥೆಯನ್ನು ನಗರದಲ್ಲಿ ಮತ್ತಷ್ಟು ಬಿಗಿಗೊಳಿಸಲಾಗಿದೆ.