ಬೆಂಗಳೂರು: ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಮಳೆ ಹಾಗೂ ಗಾಳಿಯ ವೇಗ ಹೆಚ್ಚಿರುವುದರಿಂದ ಆಗಸ್ಟ್ ಮೂರರವರೆಗೆ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದೆ. ರಾಜ್ಯದ ಒಳನಾಡಿನಲ್ಲಿ ಮಾನ್ಸೂನ್ ಚುರುಕಾಗಿದ್ದು, ಜೂನ್ ಒಂದರಿಂದ ಜುಲೈ 29ರ ವರೆಗೆ ಸರಾಸರಿ ಸಾಮಾನ್ಯ ಮಳೆಯಾಗಿದೆ. ಆದರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆಯ ಕೊರತೆಯಿದ್ದು, ವಾಡಿಕೆಯಂತೆ ಮಳೆಯಾಗಿಲ್ಲ ಎಂದು ಹವಾಮಾನ ವರದಿ ತಿಳಿಸಿದೆ.
ಈಗಿರುವ ದಕ್ಷಿಣ ಆಂಧ್ರ ಪ್ರದೇಶ ಕರಾವಳಿ ಹಾಗೂ ತಮಿಳುನಾಡಿನ ಉತ್ತರ ಕರಾವಳಿ ಮೇಲ್ಮೈ ಸುಳಿಗಾಳಿ ಇರುವುದರಿಂದ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 31 ರಿಂದ ಆಗಸ್ಟ್ 3ರ ವರೆಗೆ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 31 ರಿಂದ ಆಗಸ್ಟ್ 3 ರವರೆಗೆ ಭಾರೀ ಮಳೆ ನಿರೀಕ್ಷಿಸಿರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ತಜ್ಞ ಸಿ.ಎಸ್ .ಪಾಟೀಲ ತಿಳಿಸಿದರು.
ಉತ್ತರ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆಯಾಗಲಿದ್ದು, ಆಗಸ್ಟ್ ಮೂರರಂದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಕಲಬುರ್ಗಿ, ಬೀದರ್ನಲ್ಲಿ ಜುಲೈ 31 ಹಾಗೂ ಆಗಸ್ಟ್ 2ನೇ ತಾರೀಕಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 3ರ ವರೆಗೆ ಸಾಧಾರಣವಾಗಿ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನಗಳಲ್ಲಿ ಜುಲೈ 31, ಆಗಸ್ಟ್ 1, 2 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.