ಬೆಂಗಳೂರು: ಲುಂಗಿ ತೊಟ್ಟುಕೊಂಡು ತಲೆಗೆ ಟೋಪಿ ಹಾಕಿ ರಾಜ್ಯದ ವಿವಿಧೆಡೆ ಕಲ್ಲು ತೂರಾಟ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಆಗ್ರಹಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದಲ್ಲಿ ಕಾನೂನು ವ್ಯವಸ್ಥೆಯನ್ನು ಹಾಳುಗೆಡವಲು ಕೆಲ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಹೇಳಿದಂತೆ ಕೇಳುತ್ತಿದ್ದಾರೆ, ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕಿಡಿಕಾರಿದರು.
ಇಂಥವರನ್ನು ಬಂಧಿಸುವ ಬದಲು ಪೊಲೀಸರೇ ಕುಮ್ಮಕ್ಕು ಕೊಡುವ ಕೆಲಸ ಮಾಡುತ್ತಿದ್ದಾರೆ. ಮಂಗಳೂರಿನ ಆಸ್ಪತ್ರೆಗೆ ನುಗ್ಗಿ ಅಮಾಯಕರನ್ನು ಥಳಿಸಿದ್ದನ್ನು ನಾವು ಕಂಡಿದ್ದೇವೆ. ರಾಜ್ಯದಲ್ಲಿ ಇಂತಹ ಕಾರ್ಯ ನಿಲ್ಲಬೇಕು ಎಂದು ಆಗ್ರಹಿಸಿದರು.
ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಸಂಸದ ತೇಜಸ್ವಿ ಸೂರ್ಯ, ಸಚಿವ ಸಿ.ಟಿ. ರವಿ ಮತ್ತಿತರ ಬಿಜೆಪಿ ನಾಯಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಕಾರ್ಯವಾಗುತ್ತಿಲ್ಲ. ರಾಜ್ಯದಲ್ಲಿ ಸಾಮರಸ್ಯದ ಕೊರತೆ ಎದುರಾಗುತ್ತಿದೆ. ಸಿಎಪಿ ಹಾಗೂ ಎನ್ಆರ್ಸಿ ವಿರುದ್ಧ ರಾಜ್ಯದ ಜನ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದು, ಬಿಜೆಪಿ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡಿ ಶಾಂತಿ ಕದಡುವ ಕಾರ್ಯ ಮಾಡಬಾರದು ಎಂದರು.
ಮಾಜಿ ಸಂಸದ ಉಗ್ರಪ್ಪ ಹಾಗೂ ಮಾಜಿ ಮೇಯರ್ ರಾಮಚಂದ್ರಪ್ಪ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.