ಬೆಂಗಳೂರು: ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬೇಕಾಗಿರುವ ವಿಸ್ತೃತ ಯೋಜನಾ ವರದಿ ಮತ್ತು ದಾಖಲಾತಿಗಳನ್ನ ತುರ್ತಾಗಿ ಸಿದ್ಧಪಡಿಸಿಕೊಳ್ಳುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಇಂದು ನಡೆದ ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ತೊಂದರೆ ಆಗಬಾರದು. ಅದಕ್ಕಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳವಂತೆ ಸೂಚಿಸಿದ್ರು. ರಾಜ್ಯದೆಲ್ಲೆಡೆ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಗಳ ಕರೆಯಂತೆ ಸಾಮಾಜಿಕ ಅಂತರ ಕಾಯ್ದುಕೊಂಡು, ಆರೋಗ್ಯ ಸೇತು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜನರಿಗೆ ಅಗತ್ಯ ಮಾಹಿತಿಗಳನ್ನ ತಿಳಿಸುವ ಕೆಲಸ ಮಾಡಿ, ಸಾಮಾಜಿಕ ಜವಾಬ್ದಾರಿ ಮೆರೆಯಬೇಕು ಎಂದು ಕರೆ ನೀಡಿದ್ದಾರೆ.
ಲಾಕ್ಡೌನ್ ಮುಗಿದ ಬಳಿಕ ತುರ್ತಾಗಿ ಕಾಮಗಾರಿಗಳನ್ನ ಕೈಗೆತ್ತಿಕೊಳ್ಳಬೇಕು. ನೀರು ನಿರ್ವಹಣೆ ಮತ್ತು ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳ ಪ್ರಗತಿ ಬಗ್ಗೆ ಯಾವುದೇ ಸಂದರ್ಭದಲ್ಲಿ ಮಾಹಿತಿ ದೊರೆಯುವಂತೆ ಇರಬೇಕು. ಈ ಪ್ರಸಕ್ತ ವರ್ಷದಲ್ಲಿ ಪ್ರಾರಂಭಿಸಲಾಗುವ ಯೋಜನೆಗಳ ಡಿಪಿಆರ್ ವರದಿಗಳು ಮತ್ತು ದಾಖಲಾತಿ ಪತ್ರಗಳನ್ನ ತುರ್ತಾಗಿ ಸಿದ್ಧಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.