ಬೆಂಗಳೂರು: ಬೆಂಗಳೂರು-ಹೈದರಾಬಾದ್ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಪರಿಶೀಲನೆ ಹಂತದಲ್ಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆ ಪಕ್ಷೇತರ ಅಭ್ಯರ್ಥಿ ಶರತ್ ಕುಮಾರ್ ಬಚ್ಚೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಮತ್ತು ಬೆಂಗಳೂರು-ಮುಂಬೈ ಎಕನಾಮಿಕ್ ಕಾರಿಡಾರ್ಗಳು ಹಾದು ಹೋಗುತ್ತಿವೆ. ಇದಲ್ಲದೇ, ಬೆಂಗಳೂರು-ಹೈದರಾಬಾದ್ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರ ಸಹ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದರು.
ಓದಿ-21 ದಿನಗಳ ಪಾದಯಾತ್ರೆ ಮುಕ್ತಾಯ ..ಫೆ.7 ರಂದು ಕುರುಬರ ಬೃಹತ್ ಸಮಾವೇಶ
ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಯೋಜನೆಯಡಿ ತುಮಕೂರಿನಲ್ಲಿ ಸುಮಾರು 9,600 ಎಕರೆ ಪ್ರದೇಶದಲ್ಲಿ ಕೈಗಾರಿಕಾ ನೋಡ್ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಮೊದಲನೇ ಹಂತದಲ್ಲಿ 1,722 ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಬೆಂಗಳೂರು-ಮುಂಬೈ ಎಕನಾಮಿಕ್ ಕಾರಿಡಾರ್ ಯೋಜನೆಯಡಿಯಲ್ಲಿ ಧಾರವಾಡದಲ್ಲಿ ಸುಮಾರು 5,800 ಎಕರೆ ಪ್ರದೇಶದಲ್ಲಿ ಕೈಗಾರಿಕಾ ನೋಡ್ ಅಭಿವೃಪಡಿಸಲು ಉದ್ದೇಶಿಸಲಾಗಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಜಾರಿಯಲ್ಲಿದೆ. ಬೆಂಗಳೂರು-ಹೈದರಾಬಾದ್ ಕೈಗಾರಿಕಾ ಕಾರಿಡಾರ್ ಯೋಜನೆಯಡಿ ಯಾದಗಿರಿ-ಕಡೆಚೂರು ಕೈಗಾರಿಕಾ ನೋಡ್ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಭೂಮಿಯನ್ನು ಗುರುತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯ ಉನ್ನತಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಮತ್ತು ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಗಳಲ್ಲಿ ಒಟ್ಟು 326 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ 76,480 ಕೋಟಿ ರೂ. ಬಂಡವಾಳ ಹೂಡಿಕೆ ಮತ್ತು 1,42,070 ಉದ್ಯೋಗ ಸೃಷ್ಟಿಯಾಗಲಿದೆ. ಇನ್ವೆಸ್ಟ್ ಕರ್ನಾಟಕ-ಹುಬ್ಬಳ್ಳಿ ಸಮಾವೇಶದಲ್ಲಿ 54 ಕೈಗಾರಿಕೆಗಳೊಂದಿಗೆ ಬಂಡವಾಳ ಹೂಡಿಕೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದರಿಂದ ರಾಜ್ಯದಲ್ಲಿ 73,714 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, 90,507 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ. ಇನ್ನು ಅನುಮೋದನೆಗೊಂಡ ಹಾಗೂ ಒಡಂಬಡಿಕೆಗೆ ಸಹಿ ಮಾಡಿದ ಯೋಜನೆಗಳು ಅನುಷ್ಠಾನದ ವಿವಿಧ ಹಂತದಲ್ಲಿರುತ್ತವೆ ಎಂದು ಹೇಳಿದರು.