ಯಲಹಂಕ (ಬೆಂಗಳೂರು): ಶಾಸಕ ಎಸ್.ಆರ್.ವಿಶ್ವನಾಥ್ ಕೊಲೆಗೆ ಸಂಚು ನಡೆಸಿದ ಆರೋಪದಡಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಮತ್ತು ಕುಳ್ಳ ದೇವರಾಜ್ ವಿರುದ್ಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ ಬಳಿಕ, ಗೋಪಾಲಕೃಷ್ಣ ವಿರುದ್ಧ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಯಲಹಂಕದ ಎನ್ಇಎಸ್ ಸರ್ಕಲ್ ಮತ್ತು ರಾಜಾನುಕುಂಟೆ ಸರ್ಕಲ್ ಬಳಿ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಅವರ ಭಾವಚಿತ್ರಕ್ಕೆ ಬೆಂಕಿಯಿಟ್ಟು, ಕೊಲೆಗಡುಕ ಗೋಪಾಲಕೃಷ್ಣ ಎಂದು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ: ಶಾಸಕ ಎಸ್.ಆರ್.ವಿಶ್ವನಾಥ್ ಕೊಲೆ ಸಂಚು: ಪ್ರಕರಣ ದಾಖಲಿಸಿಕೊಂಡ ಪೊಲೀಸರು
ವಿಶ್ವನಾಥ್ ಬೆಂಬಲಿಗರ ಪ್ರತಿಭಟನೆಯಿಂದ ಯಲಹಂಕ-ದೊಡ್ಡಬಳ್ಳಾಪುರ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪರಿಣಾಮ, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲು ಟ್ರಾಫಿಕ್ ಪೊಲೀಸರು ಹರಸಾಹಸಪಟ್ಟರು.