ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಮತ್ತು ಅನಾವೃಷ್ಟಿ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಹಾಗೂ ಪರಿಹಾರ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ರೂಪಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಒಂದು ದಿನದ ಧರಣಿಗೆ ಮುಂದಾಗಿದೆ.
ಪರಿಸ್ಥಿತಿ ನಿಗ್ರಹಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳದ ಕಾರಣ, ಕೇಂದ್ರ ಸರ್ಕಾರ ಇದುವರೆಗೂ ಪರಿಹಾರ ಮೊತ್ತ ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕೆಪಿಸಿಸಿ ವತಿಯಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ವಿ.ಎಸ್ ಉಗ್ರಪ್ಪ ತಿಳಿಸಿದ್ದಾರೆ.
ಬೆಂಗಳೂರಿನ ಮೌರ್ಯ ವೃತ್ತದ ಮಹಾತ್ಮಗಾಂಧಿ ಪ್ರತಿಮೆ ಮುಂಭಾಗ ಇಂದು ಬೆಳಿಗ್ಗೆ 10.30 ರಿಂದ ಸಂಜೆ 5ರ ವರೆಗೆ ಧರಣಿ ಸತ್ಯಾಗ್ರಹ ನಡೆಯಲಿದೆ. ರಾಜ್ಯದ ಎಲ್ಲಾ ಹಿರಿಯ ಕಾಂಗ್ರೆಸ್ ನಾಯಕರು ಧರಣಿಯಲ್ಲಿ ಪಾಲ್ಗೊಳ್ಳಲಿದ್ದು, ಬೆಂಗಳೂರು ನಗರ ವ್ಯಾಪ್ತಿಯ ಶಾಸಕರು, ಬಿಬಿಎಂಪಿ ಸದಸ್ಯರು ಉಪಸ್ಥಿತರಿರಲಿದ್ದಾರೆ.
ಇದು ಒಂದು ದಿನದ ಸಾಂಕೇತಿಕ ಧರಣಿಯಾಗಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ಕೊಡದಿದ್ದಲ್ಲಿ ಇನ್ನಷ್ಟು ತೀವ್ರವಾಗಿ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲು ಪಕ್ಷ ನಿರ್ಧರಿಸಿದೆ. ಈ ವಿಚಾರದಲ್ಲಿ ಪ್ರತಿಭಟನೆ ಮಾಡುವುದು ಮಾತ್ರವಲ್ಲ, ಸಂಜೆ 5 ಗಂಟೆಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೂ ನಮ್ಮ ನಿಯೋಗ, ಮನವಿ ಪತ್ರ ಸಲ್ಲಿಸಲಿದೆ ಎಂದು ಉಗ್ರಪ್ಪ ವಿವರಿಸಿದ್ದಾರೆ.