ಬೆಂಗಳೂರು / ಕೆ.ಆರ್.ಪುರ: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕರೆ ನೀಡಲಾಗಿರುವ ಬಂದ್ ಬೆಂಬಲಿಸಿ ಕನ್ನಡಪರ ಸಂಘಟನೆಗಳು ಬಿಬಿಎಂಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದವು.
ಕೆ.ಆರ್.ಪುರದ ಬಿಬಿಎಂಪಿ ಕಚೇರಿ ಮುಂಭಾಗದಲ್ಲಿ ಕರುನಾಡ ರೈತ ಸಂಘ, ಸುವರ್ಣ ಕರ್ನಾಟಕ ಸಂಘಟನೆಗಳ ಒಕ್ಕೂಟ ಹಾಗೂ ಡಾ. ರಾಜ್ ಕುಮಾರ್ ಅಭಿಮಾನಿಗಳ ಬಳಗದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಕರುನಾಡ ರೈತ ಸಂಘದ ರಾಜ್ಯಾಧ್ಯಕ್ಷ ಮೆಹಬೂಬ್ ಪಾಷ ಮಾತನಾಡಿ, ಕರ್ನಾಟಕದಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಡಿಸಿಎಂ ಅಶ್ವತ್ಥ ನಾರಾಯಣ್ ಅವರು ತಮಿಳು ಪ್ರಾಧಿಕಾರ ರಚನೆ ಮಾಡುತ್ತೇವೆ ಎಂದು ಹೇಳಿಕೆ ನೀಡುವ ಮೂಲಕ ಕನ್ನಡಿಗರ ತಾಳ್ಮೆ ಪರೀಕ್ಷಿಸುತ್ತಿದ್ದಾರೆ. ರೈತರು, ಕಾರ್ಮಿಕರ ಪರ ಸರ್ಕಾರ ನಿಲ್ಲದೆ ಜಾತಿಗೊಂದು, ಭಾಷೆಗೊಂದು ಪ್ರಾಧಿಕಾರ ರಚನೆ ಮಾಡುತ್ತಾ ಅಭಿವೃದ್ಧಿಗೆ ಗಮನ ಕೊಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕಿಡಿಕಾರಿದರು.