ಬೆಂಗಳೂರು: ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪತ್ರಿಕೆಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಮರು ವೇಳಾಪಟ್ಟಿಯನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಮುಂಚೆ ಪರೀಕ್ಷೆ ನಡೆಸುವುದಾಗಿ ಹೇಳಲಾಗಿತ್ತು. ಆದರೆ, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕೊರೊನಾ ಎಲ್ಲೆಡೆ ತನ್ನ ಕಬಂಧಬಾಹು ಚಾಚುತ್ತಿರುವುದರಿಂದ ರಾಜ್ಯ ಸರ್ಕಾರ 9 ಜಿಲ್ಲೆಗಳಲ್ಲಿ ಲಾಕ್‌ಡೌನ್ ಘೋಷಿಸಿದೆ. ಹೀಗಾಗಿ ಇದು ವಿದ್ಯಾರ್ಥಿಗಳಿಗೆ ಅನಾನುಕೂಲವಾಗುತ್ತದೆ ಎಂಬ ಕಾರಣಕ್ಕೆ ಅನಿವಾರ್ಯವಾಗಿ ಪರೀಕ್ಷೆ ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯು ಅಂತಿಮ ವಿಷಯದ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬಹುದು ಎಂದು ಹೇಳಲಾಗಿತ್ತು. ಆದರೆ, ಸರ್ಕಾರ ಕೊರೊನಾ ಸೋಂಕಿನ ವಿರುದ್ಧ ಸಮರ ಸಾರಿರುವ ಹಿನ್ನೆಲೆಯಲ್ಲಿ ನಾವು ಅದಕ್ಕೆ ಸ್ಪಂದಿಸಬೇಕಿದೆ ಎಂದು ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.