ಬೆಂಗಳೂರು: ರಾಜ್ಯಾದ್ಯಂತ ಜುಲೈ 25ರಿಂದ ತಾತ್ಕಾಲಿಕವಾಗಿ ಮಳೆ ಪ್ರಮಾಣ ಕ್ಷೀಣಿಸುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ಜಾರ್ಖಂಡ್ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಕೇರಳ ಮತ್ತು ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡ ಇರುವ ವಿಸ್ತರಿಸಿದ ಪ್ರದೇಶವಿದೆ. ಇವುಗಳ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 28ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 25ರಿಂದ 28ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಜುಲೈ 25 ಮತ್ತು 26ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ. ಮುಖ್ಯವಾಗಿ ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿಯಲ್ಲಿ 15 ಸೆಂ.ಮೀ, ಶಿವಮೊಗ್ಗ ಜಿಲ್ಲೆಯ ತಾಳಗುಪ್ಪದಲ್ಲಿ 13 ಸೆಂ.ಮೀ, ಬೆಳಗಾವಿ ಜಿಲ್ಲೆಯ ಸಂಕೇಶ್ವರದಲ್ಲಿ 11 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬೆಳಗಾವಿ ರಿಯಲ್ ಎಸ್ಟೇಟ್ ಉದ್ಯಮಿ ಮದನಕುಮಾರ್ ಬೈರಪ್ಪನವರ ಅಪಹರಣ