ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 18ರಿಂದ ಇನ್ನಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಭಾನುವಾರ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಬಾಗಲಕೋಟೆಯಲ್ಲಿ 87 ಮಿ.ಮೀ, ಕೋಲಾರ ಜಿಲ್ಲೆಯ ಟಮಕಾದಲ್ಲಿ 77 ಮಿ.ಮೀ, ಮೈಸೂರು ಜಿಲ್ಲೆ ಸುತ್ತೂರಿನಲ್ಲಿ 21 ಮಿ.ಮೀ ಮಳೆ ಬಿದ್ದಿದೆ ಎಂದು ವರದಿಯಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಇಂದು ಮತ್ತು ನಾಳೆ ಗುಡುಗು-ಮಿಂಚುಸಹಿತ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 18 ಹಾಗೂ 19ರಂದು ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆಯಲ್ಲಿ ಮುಂದಿನ 4 ದಿನ, ಬೀದರ್, ವಿಜಯಪುರ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಗದಗ, ಹಾವೇರಿ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಮುಂದಿನ 5 ದಿನಗಳವರೆಗೆ ಈಶಾನ್ಯ ಭಾರತ, ಕೇರಳದಲ್ಲಿ ಭಾರಿ ಮಳೆ ಸಾಧ್ಯತೆ: ಐಎಂಡಿ