ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಬೆಂಗಳೂರಿನ ಶಿವಾನಂದ ವೃತ್ತ ಸಮೀಪದ ಸರ್ಕಾರಿ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪರಿಷತ್ ಪಟ್ಟಿ ಫೈನಲ್ ಆಗಿದೆ. ಫೈನಲ್ ಮಾತನಾಡುವುದು ಏನು ಇಲ್ಲ. ಇಬ್ಬರು ನಾಮಪತ್ರ ಸಲ್ಲಿಕೆ ಮಾಡ್ತಾರೆ. ನಾನು ಕೂಡ ಹೋಗ್ತಿದ್ದೇನೆ ಎಂದರು.
ಐವಾನ್ ಡಿಸೋಜ ಸಹ ಆಕಾಂಕ್ಷಿ ಆಗಿದ್ರು. ಅಬ್ದುಲ್ ಜಬ್ಬಾರ್ಗೆ ಹೈಕಮಾಂಡ್ ಟಿಕೆಟ್ ನೀಡಿದೆ. ಹೈಕಮಾಂಡ್ ನಿರ್ಧಾರವೇ ಅಂತಿಮ. ರಾಜ್ಯಸಭೆ ಅಭ್ಯರ್ಥಿ ಆಯ್ಕೆ ಇನ್ನೆರಡು ದಿನಗಳಲ್ಲಿ ಅಂತಿಮ ಆಗುತ್ತದೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷ ನಿನ್ನೆ ರಾತ್ರಿ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದು, ಇದಾದ ಬಳಿಕ ಸಾಕಷ್ಟು ಆಕಾಂಕ್ಷಿಗಳಲ್ಲಿ ನಿರಾಶೆ ಮೂಡಿದೆ. ಇವರೆಲ್ಲ ಪಕ್ಷದ ನಾಯಕರನ್ನು ಭೇಟಿ ಮಾಡಿ ತಮ್ಮ ನೋವು ತೋಡಿಕೊಳ್ಳಲು ಆರಂಭಿಸಿದ್ದಾರೆ. ಈ ಬಗ್ಗೆ ಕೇಳಿದ ಪ್ರಶ್ನೆಗೂ ಸಿದ್ದರಾಮಯ್ಯ ಉತ್ತರಿಸಲು ನಿರಾಕರಿಸಿದ್ದಾರೆ.
ಅಭ್ಯರ್ಥಿಗಳ ಭೇಟಿ : ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಉಮೇದುವಾರರಾಗಿ ಆಯ್ಕೆಯಾಗಿರುವ ಅಬ್ದುಲ್ ಜಬ್ಬಾರ್ ಹಾಗೂ ನಾಗರಾಜ ಯಾದವ್ ಅವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಅಭ್ಯರ್ಥಿಗಳಿಗೆ ಶುಭ ಹಾರೈಸಿದರು. ಶಾಸಕರಾದ ಹ್ಯಾರಿಸ್, ಪ್ರಕಾಶ್ ರಾಥೋಡ್, ಡಾ.ತಿಮ್ಮಯ್ಯ, ಮಾಜಿ ಶಾಸಕರಾದ ಮಧು ಬಂಗಾರಪ್ಪ, ಅಶೋಕ್ ಪಟ್ಟಣ ಹಾಜರಿದ್ದರು.
ಇದನ್ನೂ ಓದಿ: ಪರಿಷತ್ ಚುನಾವಣೆ: ಪಟ್ಟಿ ಪ್ರಕಟವಾದ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಭುಗಿಲೆದ್ದ ಅಸಮಾಧಾನ