ಬೆಂಗಳೂರು: ಮೇಕೆದಾಟು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ ಪ್ರಧಾನಿಗಳಿಗೆ ತಮಿಳುನಾಡು ಮುಖ್ಯಮಂತ್ರಿ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ವಿವಾದವನ್ನು ಇತ್ಯರ್ಥಪಡಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.
ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿದ್ದೇನೆ. ಮೇಕೆದಾಟು ಯೋಜನೆ ಕುರಿತು ಮಾತುಕತೆ ನಡೆಸಿದ್ದೇನೆ. ತಮಿಳುನಾಡು ಮುಖ್ಯಮಂತ್ರಿ ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ.
ಆದರೆ, ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ಮೇಕೆದಾಟು ಯೋಜನೆ ಡಿಪಿಆರ್ ಈಗಾಗಲೇ ಶಿಫಾರಸು ಆಗಿ 15 ಸಭೆ ಆಗಿದೆ. ಪ್ರಾಧಿಕಾರಕ್ಕೆ ಇರುವ ಅಧಿಕಾರದ ವ್ಯಾಪ್ತಿಯಲ್ಲಿ ಸದ್ಯದಲ್ಲೇ ಮತ್ತೊಂದು ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಈ ಸಮಸ್ಯೆಯನ್ನು ಇತ್ಯರ್ಥ ಪಡಿಸುವಂತೆ ಕೇಂದ್ರ ಸಚಿವರಲ್ಲಿ ಒತ್ತಡ ಹಾಕಿದ್ದೇನೆ ಎಂದರು.
ಮಧ್ಯಾಹ್ನ 2 ಗಂಟೆಗೆ ಹಣಕಾಸು ಸಚಿವರನ್ನು ಭೇಟಿಯಾಗುತ್ತೇನೆ. ನಂತರ ಜಿಎಸ್ಟಿ ಸಚಿವರ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದೇನೆ. ಮುಂದಿನವಾರ ಜಿಎಸ್ಟಿ ಕೌನ್ಸಿಲ್ ಸಭೆ ಇರುವುದರಿಂದ ಪೂರ್ವಭಾವಿಯಾಗಿ ಇಂದು ಸಭೆ ಮಾಡಲಾಗುತ್ತಿದೆ. ಅದನ್ನು ಮುಗಿಸಿಕೊಂಡು ನಾನು ಬೆಂಗಳೂರಿಗೆ ವಾಪಸ್ ಹೋಗಲಿದ್ದೇನೆ ಎಂದರು.
ಇದನ್ನೂ ಓದಿ : ಇಂದಿನ ದೆಹಲಿ ಪ್ರವಾಸದ ವೇಳೆ ಹೈಕಮಾಂಡ್ ನಾಯಕರ ಭೇಟಿ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ..!