ಬೆಂಗಳೂರು: ರಾಜ್ಯದಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿರುವ ಸೌಕರ್ಯಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಸರ್ಕಾರಿ ಆಸ್ಪತ್ರೆ ಆರಂಭಿಸಲು ಕೋರಿ ಗುರುನಾಥ ವದ್ದೆ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಅಂಕಿ-ಅಂಶ ಮಾಹಿತಿ ಸಲ್ಲಿಸಿ ವಿವರಣೆ ನೀಡಿದರು. ರಾಜ್ಯದಲ್ಲಿ ಜಿಲ್ಲಾ, ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ, ಪ್ರಾಥಮಿಕ, ಮೊಬೈಲ್ ಆರೋಗ್ಯ ಕೇಂದ್ರಗಳು ಸೇರಿದಂತೆ ಒಟ್ಟು 2,537 ಆಸ್ಪತ್ರೆಗಳಿವೆ. ಅಲ್ಲದೆ, ಬಯಲು ಪ್ರದೇಶಗಳಲ್ಲಿ ಪ್ರತಿ 30 ಸಾವಿರ ಜನರಿಗೆ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಪ್ರತಿ 20 ಸಾವಿರ ಜನರಿಗೆ ಒಂದರಂತೆ ಹಾಗೂ ಗ್ರಾಮೀಣ ಭಾಗದಲ್ಲಿ ಪ್ರತಿ 5 ಸಾವಿರ ಜನರಿಗೆ ಒಂದರಂತೆ ಆರೋಗ್ಯ ಕೇಂದ್ರ ಆರಂಭಿಸಲು ಸರ್ಕಾರ ತೀರ್ಮಾನಿಸಿದೆ ಎಂದು ವಿವರಿಸಿದರು.
ಇದಕ್ಕೆ ಆಕ್ಷೇಪಿಸಿದ ಅರ್ಜಿದಾರ ಪರ ವಕೀಲರು, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಜಿಲ್ಲಾಸ್ಪತ್ರೆಗಳೇ ಇಲ್ಲ. ಕಲಬುರಗಿ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾನಗರ ಸೇರಿ ಇನ್ನಿತರ ಜಿಲ್ಲೆಗಳಲ್ಲಿ ಸರ್ಕಾರಿ ಜಿಲ್ಲಾಸ್ಪತ್ರೆಗಳು ಇಲ್ಲ ಎಂದು ತಿಳಿಸಿದರು. ಇದಕ್ಕೆ ಸರ್ಕಾರಿ ವಕೀಲರು ಪ್ರತಿವಾದಿಸಿ, ಕೆಲ ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳಿವೆ. ಅಲ್ಲಿ ಎಲ್ಲ ರೀತಿಯ ವೈದ್ಯಕೀಯ ಸವಲತ್ತು ಕಲ್ಪಿಸಲಾಗಿದೆ. ಸಾರ್ವಜನಿಕರಿಗೆ ಅಗತ್ಯ ವೈದ್ಯಕೀಯ ಸೇವೆ ನೀಡಲಾಗುತ್ತಿದೆ ಎಂದರು.
ವಾದಗಳನ್ನು ಆಲಿಸಿದ ಪೀಠ, ಸರ್ಕಾರ ತಿಳಿಸಿರುವ ಆಸ್ಪತ್ರೆಗಳಿಗೆ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರು ಭೇಟಿ ನೀಡಿ ಅಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಸೂಚಿಸಿ ವಿಚಾರಣೆಯನ್ನು ಸೆ.22ಕ್ಕೆ ಮುಂದೂಡಿತು.
ಅರ್ಜಿದಾರರ ಮನವಿ:
ಗ್ರಾಮೀಣ ಭಾಗಗಳ ಜನ ಆರೋಗ್ಯ ಸೇವೆಗಳಿಂದ ವಂಚಿತರಾಗಿದ್ದು, ಕೋವಿಡ್ ವ್ಯಾಪಿಸುತ್ತಿರುವುದರಿಂದ ಮತ್ತಷ್ಟು ಸಮಸ್ಯೆಯಾಗಿದೆ. ಆದ್ದರಿಂದ, ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೌಲಭ್ಯ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಸ್ಪತ್ರೆ ತೆರೆಯುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.