ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಸೌಲಭ್ಯಗಳ ಸ್ಥಿತಿಗತಿ ಅವಲೋಕನ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಕುರಿತು ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.
ಸಭೆಯಲ್ಲಿ ನರೇಗಾ, ಜಲಚೇತನ, ಮನೆ ಮನೆಗೆ ಗಂಗೆ ಕಾರ್ಯಕ್ರಮ ಅನುಷ್ಠಾನದ ಕುರಿತು ಚರ್ಚೆ ನಡೆಸಲಾಗುತ್ತಿದೆ. ಕೊರೊನಾ ಸಂದರ್ಭದಲ್ಲಿ ಗ್ರಾಮೀಣ ಭಾಗಕ್ಕೆ ಮರಳಿ ಬಂದಿರುವ ನಿರುದ್ಯೋಗಿಗಳಿಗೆ ಜಾಬ್ ಕಾರ್ಡ್ ತ್ವರಿತಗತಿಯಲ್ಲಿ ನೀಡುವ ಕುರಿತು, ಕೂಲಿ ಮಾಡಿದ ನಂತರ ಅವರಿಗೆ ಕೂಡಲೇ ಹಣ ಸಂದಾಯ ಮಾಡಲು ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಯುತ್ತಿದೆ.
ಗ್ರಾಮೀಣ ಭಾಗದ ಬರ ಪರಿಸ್ಥಿತಿ ಕುರಿತು ಮಾಹಿತಿ ಮತ್ತು ಕುಡಿಯುವ ನೀರು ಸರಬರಾಜು ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಸಿಎಂ ವಿವರಣೆ ಪಡೆದುಕೊಳ್ಳುತ್ತಿದ್ದಾರೆ.
ಇದರ ನಡುವೆ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಕುರಿತು ಸಭೆಯಲ್ಲಿ ಪ್ರಸ್ತಾಪವಾಗಿದ್ದು ಈ ಕುರಿತು ಬಿಸಿ ಬಿಸಿ ಚರ್ಚೆ ನಡೆಸಲಾಗುತ್ತಿದೆ. ತನಿಖೆಗೂ ವಹಿಸುವ ಸಾಧ್ಯತೆ ಸಂಬಂಧವೂ ಚರ್ಚೆ ನಡೆಸಲಾಗುತ್ತಿದೆ ಎನ್ನಲಾಗಿದೆ.