ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ಉಪಚುನಾವಣೆ ಫಲಿತಾಂಶ ನ.10 ರಂದು ಹೊರ ಬೀಳಲಿದೆ. ಶಾಂತಿಯುತ ಮತಎಣಿಕೆ ನಡೆಸುವ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಆರ್ಆರ್ ನಗರದಲ್ಲಿ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆವರೆಗೂ ನಿಷೇಧಾಜ್ಞೆ ಹೇರಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿದ್ದಾರೆ.
ನಿಷೇಧಾಜ್ಞೆ ಸ್ಥಳಗಳಲ್ಲಿ ಯಾವುದೇ ರೀತಿಯ ಪ್ರತಿಭಟನೆ, ಧರಣಿ, ಮುತ್ತಿಗೆ, ಸತ್ಯಾಗ್ರಹ, ಮೆರವಣಿಗೆ ನಡೆಸುವಂತಿಲ್ಲ. ಐದಕ್ಕಿಂತ ಹೆಚ್ಚು ಜನ ಸೇರುವುದು, ಮೆರವಣಿಗೆ ಅಥವಾ ಸಭೆ ನಡೆಸುವುದು ಹಾಗೂ ಪಟಾಕಿ ಸಿಡಿಸುವುದು ಕಾನೂನು ಬಾಹಿರವಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.