ಬೆಂಗಳೂರು: ಸೆಪ್ಟೆಂಬರ್ 30ರಂದು ಸಿಎಂ, ಪಕ್ಷದ ರಾಜ್ಯಾಧ್ಯಕ್ಷರ, ಬೆಂಗಳೂರಿನ ಶಾಸಕರ, ಸಂಸದರ ಹಾಗೂ ವಿಧಾನ ಪರಿಷತ್ ಸದಸ್ಯರ ಸಭೆ ಕರೆದು ಬಿಬಿಎಂಪಿ ಮೇಯರ್ ಮತ್ತು ಉಪಮೇಯರ್ ಅಭ್ಯರ್ಥಿ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಅವರ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮೇಯರ್ ಅಭ್ಯರ್ಥಿ ಆಯ್ಕೆ ಸಂಬಂಧ ಚರ್ಚಿಸಲು ಸಚಿವ ಆರ್. ಅಶೋಕ್ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತಿಮವಾಗಿ ಸಿಎಂ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿಲಿದ್ದೇವೆ. ಅರ್ಹರಾದವರು ಮತ್ತು ಬೆಂಗಳೂರು ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುವ ವ್ಯಕ್ತಿ ಮೇಯರ್ ಆಗಬೇಕು ಎಂಬುದು ನಮ್ಮ ಆಸೆಯ ಎಂದು ತಿಳಿಸಿದರು.
ಅನರ್ಹ ಶಾಸಕರ ಬೆಂಬಲಿಗರು, ಪಾಲಿಕೆಯ ಸದಸ್ಯರು ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲಿಸುವ ಸಾಧ್ಯತೆ ಇದೆ. ಆ ಬಗ್ಗೆ ಮಾತುಕತೆ ನಡೆಯುತ್ತಿದೆ. ಅಭಿವೃದ್ಧಿ ಕಾರ್ಯಕ್ಕಾಗಿ ಆಡಳಿತರೂಢ ಪಕ್ಷಕ್ಕೆ ಪತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆಂಬಲಿಸುವುದಾಗಿ ಭರವಸೆ ನೀಡಿದ್ದಾರೆ. ಪಕ್ಷೇತರ ಅಭ್ಯರ್ಥಿಗಳ ಬೆಂಬಲವೂ ಇದೆ ಎಂದರು.
ಇನ್ನು ಅವಶ್ಯಕತೆ ಇದ್ದರೆ ಅನರ್ಹರ ಬೆಂಬಲವನ್ನೂ ಕೇಳುತ್ತೇವೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಒಂದಾಗುವ ಪ್ರಶ್ನೆಯೇ ಇಲ್ಲ. ಹಾಗಾಗಿ ಅವರು ಅಭ್ಯರ್ಥಿಯನ್ನು ಹಾಕುವುದು ಅನುಮಾನ ಎಂದರು.