ಬೆಂಗಳೂರು: ಕೆಂಗೇರಿ ಉಪನಗರದಲ್ಲಿರುವ ಅನಾಥಾಶ್ರಮವೊಂದರಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸಿದವರ ಕುರಿತು ವರದಿ ಸಲ್ಲಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.
ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ಕುರಿತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಅರ್ಜಿದಾರರ ಪರ ವಾದ ಮಾಡಿದ ವಕೀಲರು ಘಟನೆಗೆ ಸಂಬಂಧಿಸಿದಂತೆ ಇನ್ಸ್ಪೆಕ್ಟರ್ ಹಾಗೂ ಎಸಿಪಿ ವಿರುದ್ಧ ಮಾತ್ರ ಕ್ರಮ ಕೈಗೊಂಡಿದ್ದಾರೆ. ಡಿಸಿಪಿ ವಿರುದ್ಧ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಪೀಠಕ್ಕೆ ತಿಳಿಸಿದರು.
ಈ ವೇಳೆ ನ್ಯಾಯಪೀಠ ಸಂತ್ರಸ್ತ ಬಾಲಕಿಯರಿಗೆ ಸಾಂತ್ವನ ಹೇಳಲಾಗಿದೆಯೇ?, ಅವರಿಗೆ ಮಾನಸಿಕ ವೈದ್ಯರಿಂದ ಏನಾದರೂ ಚಿಕಿತ್ಸೆ ನೀಡಲಾಗಿದೆಯೇ?. ಹಾಗೂ ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸಿದವರ ಬಗ್ಗೆ ಕ್ರಮ ಕೈಗೊಂಡಿರುವ ಕುರಿತು ವರದಿ ಸಲ್ಲಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನ ಮುಂದೂಡಿದೆ.