ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಕೆ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸರಾಯಿಪಾಳ್ಯದ ನಿವಾಸಿ ಇಂತಿಯಾಜ್ (31) ಬಂಧಿತ ಆರೋಪಿ. ಈತ ಮಟನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ ನೀಡುವುದನ್ನೇ ಅಭ್ಯಾಸ ಮಾಡಿಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿ 2017ರಲ್ಲಿ ಹೆಬ್ಬಾಳದ ಬಳಿ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರ ಬಂದಿದ್ದ. ಅಲ್ಲದೇ ಸಂಪಿಗೆಹಳ್ಳಿ, ಬಾಗಲೂರಿನಲ್ಲಿಯೂ ಅಪ್ರಾಪ್ತೆಯರಿಗೆ ಕಿರುಕುಳ ನೀಡಿದ್ದನಂತೆ. ಆದರೆ, ಈ ಪ್ರಕರಣಗಳಲ್ಲಿ ಸಂತ್ರಸ್ತೆಯ ಪೋಷಕರು ದೂರು ನೀಡಿರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಜ.20ರಂದು ಕೆ.ಜಿ.ಹಳ್ಳಿಯಲ್ಲಿ 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ರಸ್ತೆ ಬದಿ ಕರೆದೊಯ್ದು, ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದ. ಆತಂಕಗೊಂಡ ಬಾಲಕಿ ಜೋರಾಗಿ ಕೂಗಿಕೊಂಡಿದ್ದಾಳೆ. ಆಗ ಸ್ಥಳೀಯರು ಸ್ಥಳಕ್ಕೆ ದೌಡಾಯಿಸುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದ. ಈ ಸಂಬಂಧ ಸಂತ್ರಸ್ತೆಯ ಪೋಷಕರು ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಭಟ್ಕಳದಲ್ಲಿ ಸುಳ್ಳು ಮರಣ ದಾಖಲೆ ಪ್ರಕರಣ; ಆರೋಪಿ ಹರ್ಷವರ್ಧನ ಪೊಲೀಸ್ ವಶಕ್ಕೆ