ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷರಾಗಿ ಷಡಕ್ಷರಿಸ್ವಾಮಿ ಅವರನ್ನು ನೇಮಕ ಮಾಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಬಿ ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬರುತ್ತಲೇ ನಿಯಮಗಳನ್ನು ಉಲ್ಲಂಘಿಸಿ ಕೆಪಿಎಸ್ಸಿ ಅಧ್ಯಕ್ಷರಾಗಿ ಷಡಕ್ಷರಿ ಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಟಿ.ನರಸಿಂಹಮೂರ್ತಿ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಎ ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ ಎಸ್.ಉಮಾಪತಿ ಅವರು ವಾದಿಸಿ, ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಅಧಿಕಾರಕ್ಕೆ ಬಂದ ದಿನವೇ ಕೆಪಿಎಸ್ಸಿಗೆ ಷಡಕ್ಷರಿಸ್ವಾಮಿ ಅವರನ್ನು ನೇಮಿಸಿದ್ದಾರೆ. ಆಯ್ಕೆ ಸಮಿತಿಯನ್ನು ಪರಿಗಣಿಸದೇ ಮಾಡಿರುವ ಈ ನೇಮಕ ಕಾನೂನು ಬಾಹಿರ. ರಾಜಕೀಯ ಹಿತಾಸಕ್ತಿಗಳ ಅನುಕೂಲಕ್ಕಾಗಿ ನಿಯಮಗಳನ್ನು ಉಲ್ಲಂಘಿಸಿ ತರಾತುರಿಯಲ್ಲಿ ಮಾಡಿರುವ ನೇಮಕ ರದ್ದುಗೊಳಿಸಬೇಕು ಎಂದು ಕೋರಿದರು.
ವಕೀಲರ ಹೇಳಿಕೆ ದಾಖಲಿಕೊಂಡ ಪೀಠ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು. ಜೊತೆಗೆ ನೇಮಕಾತಿಗೆ ಸಂಬಂಧಿಸಿದ ಕಡತವನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ತಿಳಿಸಿ ವಿಚಾರಣೆಯನ್ನು ಮಾ.12ಕ್ಕೆ ಮುಂದೂಡಿತು.