ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಭರ್ತಿಗೆ ರಾಜ್ಯ ಕಾಂಗ್ರೆಸ್‌ನಲ್ಲಿ ಗೊಂದಲ ತೀವ್ರಗೊಂಡಿದೆ. ಈ ಹಿನ್ನೆಲೆ ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರೀಯ ನಾಯಕರೊಂದಿಗೆ ಮಂಗಳವಾರ ಇಡೀ ದಿನ ಚರ್ಚೆ ನಡೆಸಿದರು.
ಸೋಮವಾರ ರಾತ್ರಿ ದೆಹಲಿಗೆ ತಲುಪಿದ ಸಿದ್ದರಾಮಯ್ಯ ಅವರು ಮಂಗಳವಾರ ಬೆಳಗ್ಗೆ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಎಐಸಿಸಿ ವರಿಷ್ಠರಾದ ಅಹಮದ್ ಪಟೇಲ್ ಹಾಗೂ ಎ.ಕೆ.ಆ್ಯಂಟೋನಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ರಾಜ್ಯ ರಾಜಕೀಯ ಬೆಳವಣಿಗೆಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು. ಸಂಜೆ 4.30ಕ್ಕೆ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಭೇಟಿಯಾಗಿ ಅರ್ಧಗಂಟೆಗೂ ಹೆಚ್ಚು ಕಾಲ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತನಾಡಿದರು.
ಉಪಚುನಾವಣಾ ಸೋಲಿನ ಹೊಣೆಹೊತ್ತು ಸಿಎಲ್ಪಿ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ಕೊಟ್ಟಿದ್ದರು. ಇದಾದ ಬಳಿಕ ಒಮ್ಮೆಯೂ ಹೈಕಮಾಂಡ್ ಜೊತೆ ಭೇಟಿ ಮಾಡಿರಲಿಲ್ಲ.
ರಾಜೀನಾಮೆ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ಕಸರತ್ತು ಗೊಂದಲಕ್ಕೆ ಕಾರಣವಾಗಿತ್ತು. ರಾಜ್ಯ ಕಾಂಗ್ರೆಸ್ ಮುಖಂಡರಲ್ಲಿ ಸಹಮತ ಒಮ್ಮತ ಮೂಡದ ಕಾರಣ ಹೈಕಮಾಂಡ್ ಸೂಚನೆ ಮೇರೆಗೆ ಮಧುಸೂದನ್ ಮಿಸ್ತ್ರಿ ವೀಕ್ಷಕರಾಗಿ ರಾಜ್ಯಕ್ಕೆ ಆಗಮಿಸಿ ಎಲ್ಲಾ ಮುಖಂಡರೊಂದಿಗೆ ವಿಷಯ ಸಂಗ್ರಹಿಸಿದ್ದರು.