ಮಂಗಳೂರು: ಇತ್ತೀಚೆಗೆ ನಗರದಲ್ಲಿ ನಡೆದಿದ್ದ ಹಿಂಸಾಚಾರದಲ್ಲಿ ಮೃತಪಟ್ಟವರ ನಿವಾಸಕ್ಕೆ ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿದ್ದರಾಮಯ್ಯ ಅವರು ಮೊದಲು ಮೃತಪಟ್ಟವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳಗಳ ಆರೋಗ್ಯ ವಿಚಾರಿಸಲಿದ್ದಾರೆ.
ಮಂಗಳೂರಿನಲ್ಲಿ ಕರ್ಪ್ಯೂ ಜಾರಿಯಲ್ಲಿದ್ದರೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನೆಯಲ್ಲಿ ಸಾವಿರಾರು ಮುಸ್ಲಿಂ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದರಿಂದಾಗಿ ಪೊಲೀಸರು ಗಾಯಗೊಂಡಿದ್ದರು. ಬಳಿಕ ಖಾಕಿ ಪಡೆ ಗಾಳಿಯಲ್ಲಿ ಹಾರಿಸಿದ್ದ ಗುಂಡಿಗೆ ಇಬ್ಬರು ಬಲಿಯಾಗಿದ್ದರು.
ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮೊನ್ನೆಯೇ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಬರಲು ಸಿದ್ಧರಾಗಿದ್ದರು. ಆದ್ರೆ, ಪೊಲೀಸರು ಆ ವಿಮಾನ ಲ್ಯಾಂಡಿಂಗ್ ಆಗಲು ನಿರಾಕರಿಸಿದ್ದರು. ಅಲ್ಲದೆ, ಇಲ್ಲಿಗೆ ಬಂದರೆ ಪರಿಸ್ಥಿತಿ ಕೈಮೀರುವ ಹಂತಕ್ಕೆ ತಲುಪಲಿದೆ ಎಂಬ ಕಾರಣಕ್ಕಾಗಿ ಸಿದ್ದರಾಮಯ್ಯ ಅವರ ಭೇಟಿಗೆ ತಡೆಯೊಡ್ಡಲಾಗಿತ್ತು. ಶುಕ್ರವಾರದಂದು ಅವರು ಬರದಿರಲು ಅನುಮತಿ ನಿರಾಕರಿಸಲಾಗಿತ್ತು ಎಂದು ಹೇಳಲಾಗ್ತಿದೆ.