ಬೆಂಗಳೂರು: ಕಳೆದ ಮೂರು ದಿನಗಳಿಂದ ಮೈಸೂರು ಜಿಲ್ಲಾ ಪ್ರವಾಸದಲ್ಲಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ತಮಿಳುನಾಡಿಗೆ ತೆರಳಲಿದ್ದಾರೆ.
ಕಾಳಿದಾಸ ಸೇವಾ ಸಮಿತಿ ಟ್ರಸ್ಟ್ ಆಯೋಜಿಸಿರುವ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಲುವಾಗಿ ಸಿದ್ದರಾಮಯ್ಯ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ. ಮೈಸೂರಿನಿಂದ ನಿನ್ನೆ ರಾತ್ರಿ ಬೆಂಗಳೂರಿನ ಸರ್ಕಾರಿ ನಿವಾಸಕ್ಕೆ ವಾಪಸಾಗಿರುವ ಅವರು ಇಂದು ಮಧ್ಯಾಹ್ನ 12:30ಕ್ಕೆ ರಸ್ತೆ ಮಾರ್ಗವಾಗಿ ಹೊರಟು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಶೂಲನ ಗಿರಿ ತಲುಪಲಿದ್ದಾರೆ. ಅಲ್ಲಿಂದ ಸಂಜೆ 5 ಗಂಟೆಗೆ ಹೊರಟು ಮತ್ತೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಕಳೆದ ಮೂರು ದಿನ ನಿರಂತರವಾಗಿ ಮೈಸೂರು ಜಿಲ್ಲಾ ಪ್ರವಾಸದಲ್ಲಿದ್ದ ಸಿದ್ದರಾಮಯ್ಯ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ. ಪಕ್ಷ ಸಂಘಟನೆಯ ಜೊತೆ ಸಮುದಾಯದ ಕಾರ್ಯಕ್ರಮದಲ್ಲಿಯೂ ಪಾಲ್ಗೊಳ್ಳುತ್ತಿರುವ ಅವರು, ಮುಂದಿನ ತಿಂಗಳು ಕಲಬುರಗಿಯಲ್ಲಿ ಕುರುಬ ಸಮುದಾಯದ ಬೃಹತ್ ಸಮಾವೇಶ ಹಮ್ಮಿಕೊಳ್ಳಲು ತೀರ್ಮಾನಿಸಿದ್ದು, ಇದಕ್ಕೆ ಅಗತ್ಯವಿರುವ ಕಾರ್ಯಯೋಜನೆಯನ್ನು ಕೂಡ ಜೊತೆ ಜೊತೆಗೆ ರೂಪಿಸಿಕೊಳ್ಳುತ್ತಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆ ಕುರುಬ ಸಮುದಾಯದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸುವಂತೆ ಮಾಡಲು ಈಗಿನಿಂದಲೇ ಕಾರ್ಯ ಪ್ರಾರಂಭಿಸಿದ್ದಾರೆ.
ಇನ್ನೊಂದೆಡೆ ಬಜೆಪಿಯಡೆಗೆ ಸಚಿವ ಕೆ.ಎಸ್.ಈಶ್ವರಪ್ಪ ಸಹ ಕುರುಬ ಸಮುದಾಯವನ್ನು ಸೆಳೆಯುವ ಪ್ರಯತ್ನ ಆರಂಭಿಸಿದ್ದು, ವಿವಿಧ ಮಠಮಾನ್ಯಗಳ ಸಹಕಾರ ಲಭಿಸಿದೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಮತ ಬ್ಯಾಂಕ್ ಅನ್ನು ಬಿಜೆಪಿ ಮತ ಬ್ಯಾಂಕ್ ಆಗಿ ಪರಿವರ್ತನೆಯಾಗದಂತೆ ತಡೆಯಲು ಶತಾಯಗತಾಯ ಪ್ರಯತ್ನ ಆರಂಭಿಸಿರುವ ಸಿದ್ದರಾಮಯ್ಯ ಎಷ್ಟು ಯಶಸ್ಸು ಕಾಣಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.