ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಪ್ರಕರಣವನ್ನು ತನಿಖೆ ನಡೆಸಲು ವಿಶೇಷ ತನಿಖಾ ತಂಡ ಎಸ್ಐಟಿ ರಚನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ ಅಧಿಕೃತ ನಿವಾಸ ಕಾವೇರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ರಮೇಶ್ ಜಾರಕಿಹೊಳಿ ಪ್ರಕರಣದ ಕುರಿತು ಸಮಗ್ರವಾಗಿ ಚರ್ಚೆ ನಡೆಸಿ, ಜಾರಕಿಹೊಳಿ ಮನವಿ ಮೇರೆಗೆ ತನಿಖೆಗೆ ಆದೇಶಿಸುವ ಕುರಿತು ನಿರ್ಧಾರ ಕೈಗೊಳ್ಳಲಾಯಿತು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮಾರ್ಚ್ 9ರಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ನನಗೆ ಪತ್ರ ಬರೆದು, ಅವರ ವಿರುದ್ಧ ಮಾರ್ಚ್ 2ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಮಾನಹಾನಿ ಮಾಡಲಾಗಿದೆ ಎಂದಿದ್ದಾರೆ. ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶ ಸ್ಪಷ್ಟವಾಗಿ ಕಾಣುತ್ತಿದೆ. ಆದ್ದರಿಂದ ತನಿಖೆ ಮಾಡಬೇಕೆಂದು ಮನವಿ ಮಾಡಿದ್ದು, ತನಿಖೆಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವರು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿದ್ದೇವೆ. ಅಂತಿಮವಾಗಿ ಈ ಷಡ್ಯಂತ್ರವನ್ನು ರೂಪಿಸಿರುವ ಹಾಗೂ ಇದರ ಹಿಂದಿರುವ ವ್ಯಕ್ತಿಗಳ ಬಗ್ಗೆ ಕೂಲಂಕಷವಾಗಿ ವಿಚಾರಣೆಯನ್ನು ಮಾಡಲು ಒಂದು ವಿಶೇಷ ತನಿಖಾ ತಂಡವನ್ನು ರಚನೆ ಮಾಡಲು ಹಾಗೂ ಅದರ ನೇತೃತ್ವವನ್ನು ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿಗೆ ವಹಿಸಿರುವುದಾಗಿ ತಿಳಿಸಿದ್ದಾರೆ.
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿಯನ್ನು ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ನೀಡುವಂತೆ ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.