ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಒಟ್ಟು ನಾಲ್ಕು ನಿಗಮಗಳಿಗೆ ಅಧ್ಯಕ್ಷರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರನ್ನು ಬಿಡಿಎ ಅಧ್ಯಕ್ಷರನ್ನಾಗಿ ನೇಮಿಸಿದೆ.
ಕೂಡಲೇ ಜಾರಿಗೆ ಬರುವಂತೆ ಅಧ್ಯಕ್ಷರಾಗಿ ನೇಮಿಸಿ ಆದೇಶ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೂ ವಿಶ್ವನಾಥ್ ಬಿಡಿಎ ಅಧ್ಯಕ್ಷರಾಗಿ ಮುಂದುವರೆಯಲ್ಲಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯನ್ನು 2019ರ ಜು.31ರಿಂದ ಅನ್ವಯವಾಗುವಂತೆ ಬಿಡಿಎ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿತ್ತು.
ಇದೀಗ ನೂತನ ಅಧ್ಯಕ್ಷರ ನೇಮಕವಾದ ಹಿನ್ನೆಲೆ ಈ ಹಿಂದೆ ಇದ್ದ ಆದೇಶ ರದ್ದುಪಡಿಸಲಾಗಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್ ಆರ್ ವಿಶ್ವನಾಥ್ ಈ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿದೆ.
ಎರಡು ಹುದ್ದೆಗಳಲ್ಲಿ ಮುಂದುವರೆಯಲು ಅವಕಾಶ ಇಲ್ಲದ ಹಿನ್ನೆಲೆ ಬಿಡಿಎ ಅಧ್ಯಕ್ಷರಾಗಿ ನೇಮಕಗೊಂಡಿರುವ ಅವರು, ತಮ್ಮ ಹಿಂದಿನ ಹುದ್ದೆಗೆ ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ. ಕಲಬುರಗಿಯ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ (ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ) ನಿರ್ದೇಶಕರು ಹಾಗೂ ಅಧ್ಯಕ್ಷರಾಗಿ ಲಿಂಗಾರೆಡ್ಡಿ ಗೌಡ ನೇಮಕವಾಗಿದ್ದಾರೆ.
ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತದ ನಿರ್ದೇಶಕರ ಮಂಡಳಿ ನಿರ್ದೇಶಕ ಹಾಗೂ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಸಿದ್ದನಗೌಡ ಈಶ್ವರಗೌಡ ಚಿಕ್ಕನಗೌಡ್ರುರನ್ನು ನೇಮಕ ಮಾಡಲಾಗಿದೆ.
ಬೆಂಗಳೂರಿನ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷರನ್ನಾಗಿ ವಿಜುಗೌಡ ಎಸ್.ಪಾಟೀಲ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ನೂತನವಾಗಿ ನೇಮಕಗೊಂಡಿರುವ ಅಧ್ಯಕ್ಷರು ಕೂಡಲೇ ಜಾರಿಗೆ ಬರುವಂತೆ ತಮ್ಮ ಅಧಿಕಾರ ವಹಿಸಿಕೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.