ಬೆಂಗಳೂರು: ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಶ್ರೀಲಂಕಾ ಪ್ರಜೆಗಳ ಅಕ್ರಮವಾಗಿ ಬಂಧಿಸಿಟ್ಟಿರುವ ಪ್ರಕರಣದ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ನೀಡಲು ಆದೇಶ ಮಾಡಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.
ಈ ಅರ್ಜಿಯಲ್ಲಿ ಪ್ರತಿವಾದಿಗಳಾದ ಕೇಂದ್ರ ಗೃಹ ಸಚಿವಾಲಯ, ರಾಷ್ಟ್ರೀಯ ತನಿಖಾ ದಳ, ರಾಜ್ಯ ಗೃಹ ಇಲಾಖೆ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಸೋಮವಾರ ಹೈಕೋರ್ಟ್ ನೋಟಿಸ್ ನೀಡಲು ಆದೇಶಿಸಿದೆ.
ಶ್ರೀಲಂಕಾದ ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ತನಕ ಅವರನ್ನು ಜೈಲಿನ ಬದಲು ಬೇರೆ ಕಡೆ ಇರಿಸಲು ರಾಜ್ಯದಲ್ಲಿ ಮೂಲಸೌಕರ್ಯ ಹೊಂದಿರುವ ಬಂಧನ ಕೇಂದ್ರ ಸ್ಥಾಪನೆ ಮಾಡಲು ಮತ್ತು ಹೈಕೋರ್ಟ್ ನಿಗದಿಪಡಿಸಿದ ಕಾಲಮಿತಿಯಲ್ಲಿ ಅಕ್ರಮ ವಲಸಿಗರನ್ನು ಗಡಿಪಾರು ಮಾಡಲು ನಿರ್ದೇಶಿಸಬೇಕು ಎಂದು ಕಾನೂನು ಸೇವಾ ಪ್ರಾಧಿಕಾರ ಅರ್ಜಿಯಲ್ಲಿ ನ್ಯಾಯಾಲಯವನ್ನು ಕೋರಿದೆ. ಮಾನವ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಂತ್ರಸ್ತರಾದ ಶ್ರೀಲಂಕಾದ 38 ಪ್ರಜೆಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಬಂಧನದಲ್ಲಿಟ್ಟಿರುವುದಕ್ಕೆ ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.
ಪರಪ್ಪನ ಅಗ್ರಹಾರದಲ್ಲಿರುವ ಶ್ರೀಲಂಕಾ ಪ್ರಜೆಗಳನ್ನು ತಕ್ಷಣವೇ ಡಿಟೆನ್ಷನ್ ಸೆಂಟರ್ಗೆ ಸ್ಥಳಾಂತರ ಮಾಡಲು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು. ಎನ್‌ಐಎ ವಿಶೇಷ ನ್ಯಾಯಾಲಯ 2021ರ ಅಕ್ಟೋಬರ್ 30ರಂದು ನೀಡಿರುವ ಆದೇಶದ ಪ್ರಕಾರ ಬೆಂಗಳೂರಿನಲ್ಲಿ ಬಂಧನ ಕೇಂದ್ರ ಸ್ಥಾಪಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಆದೇಶಿಸಬೇಕು. ಶ್ರೀಲಂಕಾದ 38 ಪ್ರಜೆಗಳ ಹೇಳಿಕೆಯನ್ನು ತ್ವರಿತವಾಗಿ ದಾಖಲಿಸಿಕೊಳ್ಳಲು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಮಂಗಳೂರಿನ ಸೀಪೋರ್ಟ್ ಅತಿಥಿ ಗೃಹದಲ್ಲಿ ಶ್ರೀಲಂಕಾದ 25 ಪ್ರಜೆಗಳು ಪಾಸ್‌ಪೋರ್ಟ್ ಮತ್ತಿತರ ದಾಖಲೆಗಳಿಲ್ಲದೇ ಬಹಳ ದಿನಗಳಿಂದ ವಾಸವಾಗಿದ್ದಾರೆ ಎಂಬ ಮಾಹಿತಿ ಆಧರಿಸಿ ಮಂಗಳೂರು ದಕ್ಷಿಣ ಪೊಲೀಸರು 2021ರ ಜೂನ್ 10ರಂದು ಅವರ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳು, ಪಾಸ್‌ಪೋರ್ಟ್ ಕಾಯಿದೆ, ವಿದೇಶಿಯರ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿದ್ದರು.
ಆದರೆ, ಅವರು ಅಕ್ರಮವಾಗಿ ಭಾರತಕ್ಕೆ ನುಸುಳಿದವರಲ್ಲ. ಕೆನಡಾದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಏಜೆನ್ಸಿಯೊಂದು ಇವರನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸಿತ್ತು ಎನ್ನಲಾಗಿದೆ. ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಎಫ್‌ಐಆರ್ ದಾಖಲಾದ ಶ್ರೀಲಂಕಾ ಪ್ರಜೆಗಳ ಹೆಸರನ್ನು ಆರೋಪ ಪಟ್ಟಿಯಿಂದ ಕೈಬಿಟ್ಟು, ಅವರನ್ನು ಸೆಂಟ್ರಲ್ ಜೈಲಿನಿಂದ ಬಂಧನ ಕೇಂದ್ರಗಳಿಗೆ ಸ್ಥಳಾಂತರಿಸುವಂತೆ ಆದೇಶಿಸಲಾಗಿತ್ತು.
ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಇತ್ತೀಚೆಗೆ ಕಾರಾಗೃಹಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಎಫ್‌ಐಆರ್ ದಾಖಲಿಸಿದ್ದ 25 ಮಂದಿ ಸೇರಿ ಒಟ್ಟು 38 ಶ್ರೀಲಂಕಾ ಪ್ರಜೆಗಳನ್ನು ಅಕ್ರಮವಾಗಿ ಬಂಧಿಸಿಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ. ಇದು ಎನ್‌ಐಎ ವಿಶೇಷ ನ್ಯಾಯಾಲಯದ ಆದೇಶ ಮತ್ತು ಮಾನವಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
(ಇದನ್ನೂ ಓದಿ: ಬೆಂಗಳೂರಲ್ಲಿ ಪ್ರೀಡಂ ಪಾರ್ಕ್ ಹೊರತುಪಡಿಸಿ ಎಲ್ಲೆಂದರಲ್ಲಿ ಪ್ರತಿಭಟನೆ ಮಾಡುವಂತಿಲ್ಲ: ಹೈಕೋರ್ಟ್ ತಾಕೀತು..!)