ಬೆಂಗಳೂರು: ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ಶ್ರೀನಿವಾಸ್ ಬಿ.ವಿ. ನೇಮಕಗೊಂಡಿದ್ದಾರೆ.
ಕಳೆದ ವರ್ಷವಷ್ಟೇ ಶ್ರೀನಿವಾಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಸಾಕಷ್ಟು ಉನ್ನತ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ಹಾಗೂ ಯುವ ಪಡೆ ಕಟ್ಟುವಲ್ಲಿ ಪಟ್ಟ ಶ್ರಮ ಪರಿಗಣಿಸಿ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಇವರನ್ನು ಮಧ್ಯಂತರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದರು. ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಇವರ ನೇಮಕ ಆದೇಶವನ್ನು ಅಧಿಕೃತವಾಗಿ ಹೊರಡಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನಕ್ಕೆ ನೈತಿಕ ಹೊಣೆ ಹೊತ್ತು ಕೇಶವ್ ಚಂದ್ ಯಾದವ್ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಅವರ ಜಾಗಕ್ಕೆ ಶ್ರೀನಿವಾಸ್ ಆಯ್ಕೆಯಾಗಿದ್ದಾರೆ. ದೇಶದ ವಿವಿಧ ರಾಜ್ಯದ ಯುವ ಕಾಂಗ್ರೆಸ್ ನಾಯಕರು ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿದ್ದರು. ಆದರೆ ಶ್ರೀನಿವಾಸ್ಗೆ ಈ ಅದೃಷ್ಟ ಒಲಿದಿದ್ದು, ಮುಂದೆ ತಾವು ನಿರಂತರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವುದಾಗಿ ತಿಳಿಸಿದ್ದಾರೆ.