ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇದೇ ತಿಂಗಳ ಮೂರನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದಿದೆ. ಫಲಿತಾಂಶದ ತಯಾರಿಯ ಕೊನೆಯ ಘಟ್ಟದಲ್ಲಿ ಕೆಲಸ ನಡೆಯುತ್ತಿದೆ. ಮೂರನೇ ವಾರ ಪಲಿತಾಂಶ ಲಭ್ಯವಾಗಲಿದೆ ಎಂದು ತಿಳಿಸಿದರು.
ಮಾರ್ಚ್ 28ರಿಂದ ರಾಜ್ಯಾದ್ಯಂತ ಪರೀಕ್ಷೆ ಆರಂಭವಾಗಿತ್ತು. ಈ ಬಾರಿ 8,73,846 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ. ರಾಜ್ಯದ 15,387 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, 45,289 ಪರೀಕ್ಷಾ ಕೊಠಡಿಗಳ ಸಿದ್ಧತೆ ಮಾಡಲಾಗಿತ್ತು. ಅತ್ಯಂತ ಸುಗಮವಾಗಿ ಈ ಬಾರಿ ಪರೀಕ್ಷೆಯನ್ನು ನಡೆಸಲಾಗಿದೆ. ಎಲ್ಲಿಯೂ ಯಾವುದೇ ರೀತಿಯ ಸಮಸ್ಯೆ ಎದುರಾಗಿಲ್ಲ. ಕೋವಿಡ್ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದರು.
ಪರೀಕ್ಷಾ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದು, ಮೂರನೇ ವಾರದಲ್ಲಿ ಪ್ರಕಟಿಸುವುದಾಗಿ ಸಚಿವರು ತಿಳಿಸಿದ್ದಾರೆ. ಆದ್ರೆ ದಿನಾಂಕವನ್ನು ಅವರು ಘೋಷಿಸಿಲ್ಲ.
(ಓದಿ: ಎಸ್ಎಸ್ಎಲ್ಸಿ ಪರೀಕ್ಷಾ ಮೌಲ್ಯಮಾಪನಕ್ಕೆ ಗೈರಾದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಆದೇಶ)