ಬೆಂಗಳೂರು: ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ಇಂದಿನಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಒಟ್ಟು 11,415 ಶಾಲೆಗಳಿಂದ 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಮೇ 19ರಂದು ಪ್ರಕಟವಾಗಿದ್ದು, ಶೇ. 85.63 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. ಅತ್ಯಂತ ವ್ಯವಸ್ಥಿತವಾಗಿ ಈ ಬಾರಿ ಪೂರಕ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿದೆ.
(ಇದನ್ನೂ ಓದಿ: ಕುರಿ ಕಾಯೋ ಕುಟುಂಬದ ಬಾಲಕನಿಗೆ SSLCಯಲ್ಲಿ 91% ಅಂಕ)
ಉಚಿತ ಬಸ್ ಸೇವೆ: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳಲ್ಲಿ ಉಚಿತ ಪ್ರಯಾಣದ ಅವಕಾಶವನ್ನ ಕಲ್ಪಿಸಲಾಗಿದೆ. ಜೂ. 27 ರಿಂದ ಜು.4 ರವರೆಗೆ ಎಲ್ಲಾ ವಿದ್ಯಾರ್ಥಿಗಳು ಈ ಅವಕಾಶದ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ. ಪರೀಕ್ಷೆಗಳು ನಡೆಯುವ ಅವಧಿಯಲ್ಲಿ 2021- 22ನೇ ಸಾಲಿನಲ್ಲಿ ವಿತರಿಸಿರುವ ಪಾಸುಗಳನ್ನು ಬಳಸಿ ಅಥವಾ ಪರೀಕ್ಷಾ ಪ್ರವೇಶ ಪತ್ರವನ್ನು ಪರಿಗಣಿಸಿ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ.