ಬೆಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳೊಂದಿಗೆ ‘ವಿದ್ಯಾಗಮ’ ಕಾರ್ಯಕ್ರಮವನ್ನು 2021ರ ಜನವರಿ 1ರಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪುನಾರಂಭಿಸಲು ತೀರ್ಮಾನಿಸಿದ್ದೇವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಸರ್ಕಾರ ಮಾಹಿತಿ ನೀಡಿದೆ.
ಬಡ ಮಕ್ಕಳಿಗೆ ಆನ್‌ಲೈನ್ ಮೂಲಕ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಲ್ಯಾಪ್‌ಟಾಪ್, ಟ್ಯಾಬ್, ಮೊಬೈಲ್, ಇಂಟರ್‌ನೆಟ್ ಸೇರಿದಂತೆ ಅಗತ್ಯ ತಾಂತ್ರಿಕ ಸೌಲಭ್ಯ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ನಗರದ ವಕೀಲ ಸಂಜೀವ್ ನರೇನ್ ಮತ್ತಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಕೋವಿಡ್ ಮಾರ್ಗಸೂಚಿ ಬಿಡುಗಡೆ
ಈ ಅರ್ಜಿಯ ವಿಚಾರಣೆ ನಿನ್ನೆಗೆ ನಿಗದಿಯಾಗಿತ್ತು. ಸರ್ಕಾರ ಈಗಾಗಲೇ ತನ್ನ ನಿರ್ಧಾರವನ್ನು ಪ್ರಮಾಣಪತ್ರದ ಮೂಲಕ ಹೈಕೋರ್ಟ್‌ಗೆ ಸಲ್ಲಿಸಿದೆ. ಹಿಂದಿನ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದ ಪರಿಣಾಮ ಸರ್ಕಾರದ ಬೊಕ್ಕಸ ಈಗಾಗಲೇ ಬರಿದಾಗಿದೆ. ಹೀಗಾಗಿ ಬಡ ವಿದ್ಯಾರ್ಥಿಗಳಿಗೆ ಮೊಬೈಲ್, ಲ್ಯಾಪ್‌ಟಾಪ್, ಇಂಟರ್‌ನೆಟ್ ಸೇರಿದಂತೆ ಅಗತ್ಯ ತಾಂತ್ರಿಕ ಸೌಲಭ್ಯ ಕಲ್ಪಿಸಲು ಸಾಧ್ಯವಿಲ್ಲ. ಕೋವಿಡ್ ಪ್ರಕರಣಗಳು ಹೆಚ್ಚಾದ ಕಾರಣ ವಿದ್ಯಾಗಮ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದರು.
ಹೇಳಿಕೆ ದಾಖಲಿಸಿಕೊಂಡಿದ್ದ ಹಿರಿಯ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ವಿದ್ಯಾಗಮ ಯೋಜನೆಯನ್ನು ಪುನಾರಾರಂಭಿಸಲು ಸಾಧ್ಯವೇ ಎಂಬ ಬಗ್ಗೆ 10 ದಿನಗಳಲ್ಲಿ ತಿಳಿಸುವಂತೆ ನಿರ್ದೇಶಿಸಿತ್ತು. ಅಲ್ಲದೆ, ಮಕ್ಕಳಿಗೆ ಲ್ಯಾಪ್‌ಟಾಪ್, ಟ್ಯಾಬ್, ಕಂಪ್ಯೂಟರ್‌ಗಳನ್ನು ವಿತರಿಸಲು ಅನುಕೂಲವಾಗುವಂತೆ ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್‌ಆರ್) ಮೂಲಕ ಸರ್ಕಾರ ಕಾರ್ಪೋರೇಟ್ ಕಂಪನಿಗಳಿಂದ ನಿಧಿ ಸಂಗ್ರಹಿಸಬಹುದು ಎಂದು ತಿಳಿಸಿತ್ತು.