ಬೆಂಗಳೂರು: ಪ್ರತಿನಿತ್ಯವೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬೀದಿ ಬದಿ ವ್ಯಾಪಾರಿಗಳು ಕಷ್ಟ ಅನುಭವಿಸುತ್ತಿದ್ದು, ಇದೀಗ ತಾಳೆ ಎಣ್ಣೆ ಬೆಲೆ ಏರಿಕೆ ಕಾವು ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಸಾಮಾನ್ಯವಾಗಿ ಬೀದಿ ಬದಿ ವ್ಯಾಪಾರಿಗಳು ತಾಳೆ ಎಣ್ಣೆಯನ್ನು ಹೆಚ್ಚು ಬಳಕೆ ಮಾಡುತ್ತಾರೆ. ಬಜ್ಜಿ, ಬೋಂಡ ಹಾಗೂ ಇನ್ನಿತರೆ ಆಹಾರ ಪದಾರ್ಥಗಳನ್ನು ಕರಿಯಲು ಈ ಎಣ್ಣೆಯನ್ನೇ ಹೆಚ್ಚಾಗಿ ಉಪಯೋಗಿಸುತ್ತಾರೆ. ಇದೀಗ ಎಣ್ಣೆ ಬೆಲೆ ಏರಿಕೆಯಿಂದಾಗಿ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಎಣ್ಣೆ ಬೆಲೆ ಏರಿಕೆ ಕುರಿತು ಮಾತನಾಡಿದ ರಾಜ್ಯ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷ ರಂಗಸ್ವಾಮಿ, ಕೋವಿಡ್ ನಂತರ ಬೀದಿ ಬದಿ ವ್ಯಾಪಾರಿಗಳು ಸಂಕಷ್ಟದಲ್ಲಿದ್ದಾರೆ. ಇದರ ಮೇಲೂ ಬೆಲೆ ಏರಿಕೆ ಆದರೆ ಸಹಜವಾಗಿ ಆಹಾರ ಪದಾರ್ಥಗಳ ಬೆಲೆ ಏರಿಕೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಬೆಲೆ ಏರಿಕೆ ಆದರೆ ವ್ಯಾಪಾರ ಕುಸಿತ ಆಗಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಣ್ಣೆಯ ಬೆಲೆ ಏರಿಕೆಯನ್ನು ನಿಯಂತ್ರಣಕ್ಕೆ ತರಬೇಕು ಎಂದು ಒತ್ತಾಯಿಸಿದರು.