ಬೆಂಗಳೂರು: ಜುಲೈ 3ನೇ ವಾರದಲ್ಲಿ ನಡೆಯಲಿರುವ 2020-21ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಈಗಾಗಲೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರು ನಗರದ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.
ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಬರೆದ ಪತ್ರದಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕಾದ ಶಿಕ್ಷಕರು ಕೋವಿಡ್ ಲಸಿಕೆ ಪಡೆಯುವುದು ಮತ್ತು ಪರೀಕ್ಷಾ ಪೂರ್ವ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕಿದೆ. ಈಗಾಗಲೇ ಶೈಕ್ಷಣಿಕ ಚುಟುವಟಿಕೆಗಳು ಪ್ರಾರಂಭಗೊಂಡಿದ್ದು, ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಹ ನಡೆಯುತ್ತಿದೆ. ಶಿಕ್ಷಕರು ಶಾಲಾ ಕರ್ತವ್ಯದಲ್ಲಿ ಭಾಗಿಯಾಗಿರಬೇಕಿರುವುದರಿಂದ ತಕ್ಷಣವೇ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಸಚಿವರು ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲರಿಗೂ ಲಸಿಕೆ
ಜುಲೈ 3ನೇ ವಾರದಲ್ಲಿ ನಡೆಯಲಿರುವ 2020-21ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಗೆ ಆದ್ಯತೆಯ ಮೇಲೆ ಕೋವಿಡ್-19ರ ಲಸಿಕೆ ನೀಡಲು ಅಗತ್ಯ ಕ್ರಮಗಳನ್ನು ವಹಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯ ಪಟ್ಟಿಯನ್ನು ಆಯಾ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ನೀಡಲಿದ್ದು, ಅವರೆಲ್ಲರಿಗೂ ಪರೀಕ್ಷೆ ಆರಂಭಕ್ಕೂ ಮುನ್ನವೇ ಲಸಿಕೆ ದೊರೆಯುವಂತೆ ಕ್ರಮ ವಹಿಸಬೇಕೆಂದು ಸಚಿವರು ತಿಳಿಸಿದ್ದಾರೆ.
ಈ ಬಾರಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಹಿನ್ನೆಲೆಯಲ್ಲಿ 6000ಕ್ಕೂ ಹೆಚ್ಚಿನ ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗುತ್ತದೆ. ಹೆಚ್ಚಿನ ಶಿಕ್ಷಕರು, ಸಿಬ್ಬಂದಿ ಮತ್ತು ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಅವರೆಲ್ಲರಿಗೂ ಆದ್ಯತೆಯ ಮೇಲೆ ಲಸಿಕೆ ನೀಡಬೇಕಾದ ಅಗತ್ಯವಿದೆ. ಪರೀಕ್ಷೆಗಳು ಹೆಚ್ಚಿನ ಸುರಕ್ಷತಾ ವಾತಾವರಣದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ ಎಲ್ಲರೂ ಲಸಿಕೆ ಪಡೆಯುವುದು ಅಗತ್ಯವಾಗಿದೆ ಎಂದು ಸಚಿವರು ಹೇಳಿದ್ದಾರೆ.