ಬೆಂಗಳೂರು: ರಾಜ್ಯದಲ್ಲಿ ಭೀಕರ ಪ್ರವಾಹ ಉಂಟಾಗಿ 45 ದಿನ ಕಳೆದರೂ ಕೇಂದ್ರ ಸರ್ಕಾರ ಇದುವರೆಗೂ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಕಾಂಗ್ರೆಸ್ ಪಕ್ಷ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆ ಮೂಲಕ ಟ್ವೀಟ್ ಮಾಡಿ, ರಾಜ್ಯದಲ್ಲಿ ಉಂಟಾದ ಭೀಕರ ಪ್ರವಾಹದ ಕುರಿತು ಇಲ್ಲಿಯವರೆಗೆ ನರೇಂದ್ರ ಮೋದಿ ಸರ್ಕಾರ ಬಿಡಿಗಾಸು ಪರಿಹಾರ ನೀಡಿಲ್ಲ. ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸದ ಯಡಿಯೂರಪ್ಪ ನೇತೃತ್ವದ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಹೆಸರಿನಲ್ಲಿ ಕೂಡ ಟ್ವೀಟ್ ಮಾಡಲಾಗಿದ್ದು, ಮೋದಿ ಸರ್ಕಾರ ಜನಾದೇಶವನ್ನು 'ಅತ್ಯಂತ ಅಪಾಯಕಾರಿ'ಯಾಗಿ ಬಳಸಿಕೊಳ್ಳುತ್ತಿದೆ. ಈ ಮೂಲಕ ಕಾಂಗ್ರೆಸ್ನ ಸಂಕಲ್ಪ ಮತ್ತು ತಾಳ್ಮೆಯ ಸ್ಥಿತಿಯನ್ನು ಪರೀಕ್ಷಿಸುತ್ತಿದೆ. ಬಿಜೆಪಿ ಮತ್ತು ಕೇಂದ್ರ ಸರ್ಕಾರವನ್ನು ಹಣಿಯಲು ನಮಗಿರುವ ಏಕೈಕ ಮಾರ್ಗ ಚಳವಳಿ. ಪಕ್ಷದ ಕಾರ್ಯಕರ್ತರು, ನಾಯಕರು ಚಳವಳಿ ಕಾರ್ಯಸೂಚಿಯನ್ನು ಕೈಗೆತ್ತಿಕೊಳ್ಳಬೇಕು ಎಂದಿದೆ.