ಬೆಂಗಳೂರು : ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಠ್ಯವನ್ನು ಕೈ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಪಠ್ಯ ಪುಸ್ತಕ ಗೊಂದಲ ಕುರಿತು ಸಮಾಲೋಚನೆ ನಡೆಸಿದರು. ಬಳಿಕ ಸ್ಪಷ್ಟನೆ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಿಕ್ಷಣ ಇಲಾಖೆ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಡುವ ಕುರಿತು ಊಹಾಪೋಹಗಳೆದ್ದಿವೆ. ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ.
ಈಗಾಗಲೇ ಮುಖ್ಯಮಂತ್ರಿಗಳನ್ನು ಹಾಗೂ ಶಿಕ್ಷಣ ಸಚಿವ ನಾಗೇಶ್ ಅವರನ್ನು ಭೇಟಿಯಾಗಿ ಈ ಕುರಿತು ಮಾತನಾಡಿದ್ದು, ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ರಾಜ್ಯಾದ್ಯಂತ ಇರುವ ಈಡಿಗ, ಬಿಲ್ಲವ ಸಮುದಾಯ ಮತ್ತು ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿಗಳು ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿನಂತಿಸಿಕೊಂಡಿದ್ದಾರೆ.
ಓದಿ : ದೊಡ್ಡಬಳ್ಳಾಪುರ: ಭಾರಿ ಮಳೆಗೆ ಕೊಚ್ಚಿ ಹೋದ ತಾತ್ಕಾಲಿಕ ಸೇತುವೆ, 3 ಗ್ರಾಮಗಳ ಸಂಪರ್ಕ ಕಡಿತ