ಬೆಂಗಳೂರು: ರಾಜ್ಯದಲ್ಲಿನ ಬರಪೀಡಿತ ತಾಲೂಕುಗಳಲ್ಲಿ ಗೋ ಶಾಲೆಗಳನ್ನ ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಪೊಲೀಸರು ರಹಸ್ಯವಾಗಿ ಮಾಹಿತಿ ಸಂಗ್ರಹಿಸಿದಕ್ಕೆ ಹೈಕೊರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ಪೀಠ, ಪೊಲೀಸರ ಹಸ್ತಕ್ಷೇಪಕ್ಕೆ ಆಕ್ರೋಶಗೊಂಡು ನ್ಯಾಯಾಲಯದಲ್ಲಿ ಒಂದು ಪ್ರಕರಣದ ಅರ್ಜಿ ವಿಚಾರಣೆ ನಡೆಯುತ್ತಿರುವಾಗ ಪೊಲೀಸರ ಮಧ್ಯಪ್ರವೇಶ ಸರಿಯಲ್ಲ. ನ್ಯಾಯಾಲಯ ಅದನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದೆ. ಇದಕ್ಕೂ ಮುನ್ನ ಅರ್ಜಿದಾರರಾಗಿರುವ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಎ.ಮಲ್ಲಿಕಾರ್ಜುನ್, ಹೈಕೋರ್ಟ್ ಕಾನೂನು ಸೇವಾ ಸಮಿತಿ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ವೇಳೆ ಪೊಲೀಸರು ಫೋನ್ ಮಾಡಿ ಅರ್ಜಿಗೆ ಸಂಬಂಧಿಸಿದ ಮಾಹಿತಿ ಕೇಳಿದ್ದನ್ನು ಕೋರ್ಟ್ ಗಮನಕ್ಕೆ ತಂದರು.
ಪೊಲೀಸರು ಈ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಿಲ್ಲ ಎಂದು ಸರ್ಕಾರದ ಪರ ವಕೀಲರು ಪ್ರಭುಲಿಂಗ ನಾವಾಡಗಿ ಸಮರ್ಥಿಸಿಕೊಂಡರು. ವಿಚಾರಣೆ ವೇಳೆ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಅನುಪಾಲನಾ ವರದಿಯನ್ನು ಸರ್ಕಾರದ ಪರ ವಕೀಲರು ನ್ಯಾಯಲಯಕ್ಕೆ ಸಲ್ಲಿಸಿದ್ದು, ವಿಚಾರಣೆಯನ್ನ ಇದೇ ತಿಂಗಳ 13ಕ್ಕೆ ಮುಂದೂಡಿಕೆ ಮಾಡಲಾಗಿದೆ.