ಬೆಂಗಳೂರು: ರಾಜ್ಯದ ಭತ್ತ ಬೆಳೆಗಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದ್ದು, ಪ್ರತಿ ಕ್ವಿಂಟಾಲ್ ಭತ್ತಕ್ಕೆ 200 ರೂ. ಬೆಂಬಲ ಬೆಲೆ ನೀಡುವುದಾಗಿ ಘೋಷಿಸಿದೆ.
ಭತ್ತಕ್ಕೆ ಬೆಂಬಲ ಬೆಲೆ ನಿಗದಿ ಮಾಡುವ ವಿಚಾರ ಸಂಬಂಧ ರಾಯಚೂರು, ಬಳ್ಳಾರಿ, ಕೊಪ್ಪಳ ಭಾಗದ ಜನಪ್ರತಿನಿಧಿಗಳು ಹಾಗು ರೈತ ಮುಖಂಡರ ನಿಯೋಗ ಸಿಎಂಗೆ ಮನವಿ ಸಲ್ಲಿಸಿತ್ತು. ಸಚಿವ ಬಿ.ಶ್ರೀರಾಮುಲು, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಶಾಸಕ ವೆಂಕಟರಾವ್ ನಾಡಗೌಡ ನೇತೃತ್ವದಲ್ಲಿ ಭೇಟಿ ನೀಡಿ ಭತ್ತಕ್ಕೆ ಬೆಂಬಲ ಬೆಲೆ ನೀಡುವಂತೆ ಸಿಎಂಗೆ ಮನವಿ ಸಲ್ಲಿಸಲಾಗಿತ್ತು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈತ ಹಾಗೂ ಜನಪ್ರತಿನಿಧಿಗಳ ನಿಯೋಗದ ಮನವಿಗೆ ಸ್ಪಂದಿಸಿ ಪ್ರತಿ ಕ್ವಿಂಟಾಲ್ ಭತ್ತಕ್ಕೆ 200 ರೂ. ಬೆಂಬಲ ಬೆಲೆ ನೀಡುವುದಾಗಿ ಘೋಷಿಸಿದ್ದಾರೆ.
ಸಭೆ ಬಳಿಕ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಬಿ. ಶ್ರೀರಾಮುಲು, ಮೂರು ಜಿಲ್ಲೆಗಳ ರೈತರು ಜನ ಪ್ರತಿನಿಧಿಗಳ ನಿಯೋಗದ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಹೊರತುಪಡಿಸಿ 200 ರೂ.ಗಳ ಬೆಂಬಲ ಬೆಲೆಯನ್ನು ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ಮೂರು ಜಿಲ್ಲೆಗೆ ಮಾತ್ರವಲ್ಲದೇ ಇಡೀ ರಾಜ್ಯಕ್ಕೆ ಇದು ಅನ್ವಯವಾಗಲಿದೆ ಎಂದು ಹೇಳಿದರು.