ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ನಾಗಪುರದ ವಾರ್ಡ್ ನಂ.67ರ ಭೋವಿ ಪಾಳ್ಯದಲ್ಲಿ ಬಿಬಿಎಂಪಿ ವತಿಯಿಂದ ನೂತನವಾಗಿ ನಿರ್ಮಿಸಿರುವ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಬ್ಯಾಡ್ಮಿಂಟನ್ ಕೋರ್ಟ್ ಅನ್ನು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಕೊರೊನಾ ವೈರಸ್ನಿಂದಾಗಿ ದೇಶವೇ ಸಂಕಷ್ಟದಲ್ಲಿದೆ. ಇಂತಹ ಸಮಯದಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಅತ್ಯುತ್ತಮ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿರುವ ಸಚಿವ ಕೆ. ಗೋಪಾಲಯ್ಯ ಹಾಗೂ ಸ್ಥಳೀಯ ಪಾಲಿಕೆ ಸದಸ್ಯ ಭದ್ರೆಗೌಡರನ್ನು ಅಭಿನಂದಿಸಿದರು. ಅಲ್ಲದೆ, ಸಾರ್ವಜನಿಕರು ಬ್ಯಾಡ್ಮಿಂಟನ್ ಕೋರ್ಟ್ನ್ನು ದೈಹಿಕ ಅಂತರ ಕಾಯ್ದುಕೊಂಡು ಬಳಸಿಕೊಳ್ಳುವುದು ಒಳ್ಳೆಯದು ಎಂದರು.
ಬಳಿಕ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ, ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದೇನೆ. ಎಲ್ಲ ಬಿಬಿಎಂಪಿ ಸದಸ್ಯರು ಹಾಗೂ ಅಧಿಕಾರಿಗಳ ಸಹಕಾರದಿಂದ ಇಂದು ಕ್ಷೇತ್ರ ಬೆಳವಣಿಗೆ ಹೊಂದಿದೆ. ಬ್ಯಾಡ್ಮಿಂಟನ್ ಕೋರ್ಟ್ ಮತ್ತು ಮಕ್ಕಳ ಉದ್ಯಾನವನವನ್ನು ಲೋಕಾರ್ಪಣೆ ಮಾಡಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.